

ಬೆಂಗಳೂರು: ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ವಿವಿಧ ಕಾರ್ಯಚಟುವಟಿಕೆ ಕುರಿತು ಸರಣಿ ಸಭೆ ನಡೆಸಿದರು.
ಅಧಿಕಾರಿ ತಂಡದೊಂದಿಗೆ ಘನತ್ಯಾಜ್ಯ ನಿರ್ವಹಣೆ, ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ, ಮತಗಟ್ಟೆ ಕೇಂದ್ರಕ್ಕೆ ಭೇಟಿ, ಘನತ್ಯಾಜ್ಯ ನಿರ್ವಹಣೆ ಕುರಿತ ವೆಬ್ ಸೈಟ್ ಪರಿಶೀಲನೆ ನಡೆಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತ ಸಭೆ ನಡೆಸಿ, ತಾಲೂಕುವಾರು ಘನತ್ಯಾಜ್ಯ ನಿರ್ವಹಣಾ ಘಟಕದ ಮಾಹಿತಿ ಪಡೆಯುವ ಜತೆಗೆ ಪ್ರತಿದಿನ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸೂಕ್ತ ರೀತಿ ನಿರ್ವಹಣೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತ ಸಭೆಯಲ್ಲಿ ತಾಲೂಕುವಾರು ಘನತ್ಯಾಜ್ಯ ನಿರ್ವಹಣಾ ಘಟಕದ ಬಗ್ಗೆ ವೆಬ್‌ಸೈಟ್‌ನಲ್ಲಿನ ಮಾಹಿತಿ ಪರಿಶೀಲನೆ ನಡೆಸಿದರು. ತಾಲೂಕುವಾರು ಘನತ್ಯಾಜ್ಯ ನಿರ್ವಹಣಾ ಘಟಕದ ಮಾಹಿತಿಯನ್ನು ಕಾಲಕಾಲಕ್ಕೆ ಅಪ್ ಲೋಡ್‌ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತಗಟ್ಟೆ ಕೇಂದ್ರಕ್ಕೆ ಭೇಟಿ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮತಗಟ್ಟೆ ಕೇಂದ್ರ ಸಂಖ್ಯೆ 75ಕ್ಕೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಮಂಜುನಾಥ್, ದೊಡ್ಡಬಳ್ಳಾಪುರ ತಹಸೀಲ್ದಾರ್ ಶಿವರಾಜ್ ತಂಡದೊಂದಿಗೆ ಭೇಟಿ ನೀಡಿದರು.
ಹಾಗೆಯೇ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ವೈಖರಿಯನ್ನು ಪರಿಶೀಲಿಸಿದ ಅಂಜುಂ ಪರ್ವೇಜ್, ದೊಡ್ಡಬಳ್ಳಾಪುರ ಪಟ್ಟಣಕ್ಕೆ ಭೇಟಿ ನೀಡಿ ಮನೆಗಳಿಗೆ ತೆರಳಿ ಕರಡು ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಕುರಿತು ಮರು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ನೋಡಲ್ ಅಧಿಕಾರಿ ರವಿಕುಮಾರ್ ಮತ್ತಿತರರು ಇದ್ದರು.