ಹೆಣ್ಣು ಮಕ್ಕಳ ರಕ್ಷಣೆಗೆ ಬಿಗಿ ಕ್ರಮ : ಸಚಿವ ದಿನೇಶ್ ಗುಂಡೂರಾವ್

Girl child day - 1
Published on

ಬೆಂಗಳೂರು: ಹೆಣ್ಣು ಮಕ್ಕಳ ಸುರಕ್ಷತೆಗಾಗಿ, ಭ್ರೂಣ ಹತ್ಯೆ ತಡೆಗೆ ಆರೋಗ್ಯ ಇಲಾಖೆ ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಬೆಂಗಳೂರಿನ ಆರೋಗ್ಯಸೌಧದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಪಿಂಕ್ ಬಲೂನ್‌ಗಳನ್ನು ತೇಲುಬಿಡುವ ಮೂಲಕ ಉದ್ಘಾಟಿಸಿ, ಮಾತನಾಡಿದರು. ರಾಜ್ಯದಲ್ಲಿ ಭ್ರೂಣ ಹತ್ಯೆ ಇಷ್ಟೊಂದು ಪ್ರಮಾಣದಲ್ಲಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದನ್ನ ಸಹಿಸಲು ಸಾಧ್ಯವಿಲ್ಲ. ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಪರಿಸ್ಥಿತಿ ಎದುರಾಗಿರುವುದು ಶೋಚನೀಯ. ಆದರೆ ಸರ್ಕಾರ ಹೆಣ್ಣು ಮಕ್ಕಳ ಸುರಕ್ಷತೆಗೆ ಎಲ್ಲ ರೀತಿಯ ಬಿಗಿ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ ಎಂದರು.

ಭ್ರೂಣ ಹತ್ಯೆ ತಡೆಯಲು ಇಲಾಖೆ ನಡೆಸುತ್ತಿರುವ ಕಾರ್ಯಚರಣೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೆ ರಾಜ್ಯ ಸರ್ಕಾರ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾರ್ಯಪಡೆಗಳನ್ನ ರಚಿಸಿದೆ. ನಕಲಿ ವೈದ್ಯರು ಹಾಗೂ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ಕುಮಾರ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸೇರಿ ನೂರಾರು ಮಹಿಳಾ ಸಿಬ್ಬಂದಿ ಪಿಂಕ್ ಉಡುಗೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net