ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವು: ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ

Girl dies on the spot in accident Mandya
Published on

ನಾಗಮಂಗಲ: ತಾಲೂಕಿನ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಗುಡ್ಡೇನಹಳ್ಳಿ ಕ್ರಾಸ್‌ಬಳಿ ಭಾನುವಾರ ಚಲಿಸುತ್ತಿದ್ದ ಲಾರಿಗೆ ಹಿಂಬದಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯಪುರ ಜಿಲ್ಲೆ ಇಟಗಿ ಪಟ್ಟಣದ ಬಸವರಾಜು ಮತ್ತು ಜ್ಯೋತಿ ದಂಪತಿಯ ಪುತ್ರಿ ನವ್ಯಾ(10) ಮೃತೆ. ಈಕೆ ಮೈಸೂರಿನಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ಸಂಬಂಧಿಕರ ಜನ್ಮದಿನ ಆಚರಿಸಲು ತನ್ನ ಕುಟುಂಬದವರೊಂದಿಗೆ ಕಾರಿನಲ್ಲಿ ಆಗಮಿಸುತ್ತಿದ್ದರು. ಈ ಸಮಯದಲ್ಲಿ ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದ ಬಳಿಕ ಲಾರಿ ನಿಲ್ಲಿಸದೆ ಹೊರಟುಹೋಗಿದೆ.

ಸ್ಥಳಕ್ಕಾಗಮಿಸಿದ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಂದ್ರ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಟ್ಟು, ಬಾಲಕಿ ಮೃತದೇಹವನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಿದರು. ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net