ಆರೋಗ್ಯಕರ ಜೀವನಕ್ಕೆ ಕ್ರೀಡೆಗಳಿಗೆ ಆದ್ಯ ನೀಡಿ

Girls Kabaddi Tournament
ಬಾಲಕಿಯರ ಕಬಡ್ಡಿ ಪಂದ್ಯಾವಳಿ
Published on

ವಿಜಯವಾಣಿ ಸುದ್ದಿಜಾಲ ನಂದಗುಡಿ
ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜತೆಗೆ ಕ್ರೀಡೆ ಬಗ್ಗೆಯೂ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಆಟೋಟ ಸ್ಪರ್ಧೆಗಳಲ್ಲಿ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದು ಬಿಇಒ ಪದ್ಮನಾಭ ಹೇಳಿದರು.
ನಂದಗುಡಿಯ ಕೆಪಿಎಸ್ ಶಾಲಾ ಮೈದಾನದಲ್ಲಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರಾಥಮಿಕ, ಪ್ರೌಢಶಾಲೆಯ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲೇ ಹೆಚ್ಚು ಸಮಯ ಕಳೆಯುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಇದು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಮಕ್ಕಳ ಮಾನಸಿಕ, ದೈಹಿಕ ಮತ್ತು ಸಾಧನೆ ಮಾಡುವ ನಿಟ್ಟಿನಲ್ಲಿ ಸರ್ಕಾರವೇ ಕ್ರೀಡಾಕೂಟ ಆಯೋಜಿಸುತ್ತಿದೆ. ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದರು.
ಸಮಾಜ ಸೇವಕ ಕಲ್ಕೆರೆ ಕೆ.ಎಸ್.ಮಹದೇವಯ್ಯ ಮಾತನಾಡಿ, ಖ್ಯಾತ ಆಟಗಾರರನ್ನು ಆದರ್ಶವನ್ನಾಗಿಟ್ಟುಕೊಂಡು ಶೈಕ್ಷಣಿಕ ಪ್ರಗತಿಯ ಜತೆಗೆ ಕ್ರೀಡೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಆಸಕ್ತಿ ತೋರಬೇಕು. ಕ್ರಿಕೆಟ್ ವ್ಯಾಮೋಹದಿಂದ ಕಬಡ್ಡಿ, ಖೋಖೋ ಇನ್ನಿತರ ಗ್ರಾಮೀಣ ಕ್ರೀಡೆಗಳು ತೆರೆಮರೆಗೆ ಸರಿಯುತ್ತಿವೆ. ಕ್ರೀಡೆಗೆ ಪ್ರೋತ್ಸಾಹ ನೀಡಿದಲ್ಲಿ ಅಂತಾರಾಷ್ಟ್ರೀಯಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದರು.
ಸಮಾಜ ಸೇವಕ ಕೆ.ಎಸ್.ಮಹದೇವಯ್ಯ ಹಾಗೂ ಎಂ.ಮಂದೀಪ್‌ಗೌಡ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಪುಸ್ತಕ ಹಾಗೂ ಶಾಲಾ ಬ್ಯಾಗ್ ಕೊಡುಗೆಯಾಗಿ ವಿತರಿಸಿದರು.
ಶಿಕ್ಷಕರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಮುನಿಶಾಮಯ್ಯ, ಟಿಪಿಇಐನ ಜಗದೀಶ್, ಪಿಡಿಒ ಪುಷ್ಪಲತಾ, ಕಾರ್ಯದರ್ಶಿ ವೆಂಕಟೇಶ್, ತರಬೇತುದಾರ ಲಕ್ಷ್ಮಣ್, ದಾನಿ ಲಕ್ಷ್ಮಣ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಪ್ರಕಾಶ್, ತಾಲೂಕು ಅಧ್ಯಕ್ಷ ಡಿ.ಕೃಷ್ಣಪ್ಪ, ನಿರ್ದೇಶಕ ಗೋವಿಂದರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net