ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ

RemasterDirector_1a5c03258
RemasterDirector_1a5c03258
Published on

ಪಿರಿಯಾಪಟ್ಟಣ : ಮಗುವನ್ನು ವಿಶ್ವಮಾನವನನ್ನಾಗಿ ಮಾಡುವುದು ಶಿಕ್ಷಣದ ಮುಖಾಂತರ ಮಾತ್ರ ಸಾಧ್ಯ ಎಂದು ಪಟ್ಟಣ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶೆ ಜೆ.ಶ್ವೇತಾ ತಿಳಿಸಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಪಟ್ಟಣದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.


ಪ್ರತಿಯೊಂದು ಮಗುವಿನ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನು ದೇಶದ ಸತ್ಪ್ರಜೆಗಳನ್ನಾಗಿ ರೂಪಿಸಬೇಕು. ಬಾಲಕಾರ್ಮಿಕರನ್ನು ಅಪಾಯಕಾರಿ ಉದ್ಯಮಿಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದನ್ನು ತಡೆಗಟ್ಟಿ ರಾಷ್ಟ್ರದ ಮುಖ್ಯ ವಾಹಿನಿಗೆ ಕರೆ ತರಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಯತ್ನಿಸಬೇಕಿದೆ ಎಂದರು.


ಬಾಲ್ಯಾವಸ್ಥೆಯಲ್ಲಿರುವ 14 ವರ್ಷದ ಒಳಗಿನ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಕಾರ್ಖಾನೆಗಳಲ್ಲಿ, ಗಣಿ ಕೋರೆಗಳಲ್ಲಿ, ಅಂಗಡಿಗಳಲ್ಲಿ ದುಡಿಸಿಕೊಳ್ಳುವುದು ಅಪರಾಧ. ಅಂತಹ ಮಾಲೀಕರಿಗೆ ಎರಡು ವರ್ಷದವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶವಿರುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ ಇರುವುದು ಬೇಸರದ ಸಂಗತಿ. ಮಕ್ಕಳು ಶಿಕ್ಷಣ ಕಲಿಯುವ ವಯಸ್ಸಿನಲ್ಲಿ ನಮ್ಮ ಸುತ್ತಮುತ್ತ ಅಂಗಡಿಗಳಲ್ಲಿ ಕೆಲಸಕ್ಕೆ ಸೇರಿಸಿಕೊಂಡು ದುಡಿಸಿಕೊಂಡರೆ ಸಂಬಂಧಪಟ್ಟ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಧನಪಾಲ್, ಕಾರ್ಯದರ್ಶಿ ಕೆ.ಶಂಕರ್, ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಮಂಜುನಾಥ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಮಲ್ಲಿಕಾರ್ಜುನ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಶಿವರಾಜ್, ಶಿಕ್ಷಕರಾದ ಪುಟ್ಟರಾಜು, ರವಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net