ಶುಚಿತ್ವಕ್ಕೆ ಆದ್ಯತೆ ನೀಡಿ: ಸಚಿವ ಸುಧಾಕರ್ ಸೂಚನೆ

health minister visit
Published on

ಉಡುಪಿ: ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ಆರೋಗ್ಯ ಸಚಿವ ಕೆ. ಸುಧಾಕರ್ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ರೋಗಿಗಳ ಬಳಿ ತೆರಳಿ ಅವರ ಯೋಗ ಕ್ಷೇಮವನ್ನು ವಿಚಾರಿಸಿದ ಅವರು, ಬೆಡ್‌ಶೀಟ್‌ಗಳು ಕೊಳಕಾಗಿದ್ದು, ಸ್ವಚ್ಛತೆಯ ಜವಾಬ್ದಾರಿ ವಹಿಸಿರುವ ಗುತ್ತಿಗೆದಾರರಿಗೆ ನೋಟಿಸ್ ನೀಡುವಂತೆ ವೈದ್ಯಾಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರ ತೆರೆಯುವಂತೆ ಅಧಿಕಾರಿಗಳಿಗೆ ಹೇಳಿದರು. ಕೋವಿಡ್ ಲಸಿಕೆ ವಿತರಣಾ ಕೊಠಡಿಗೆ ಭೇಟಿ ನೀಡಿ ಲಸಿಕೆ ವಿತರಣೆ ಬಗ್ಗೆ ಪರಿಶೀಲಿಸಿ, ಲಸಿಕೆ ಪಡೆದವರ ಅಭಿಪ್ರಾಯ ಆಲಿಸಿದರು. ಜಿಲ್ಲಾಸ್ಪತ್ರೆಯ ವೈದ್ಯಕೀಯ ವ್ಯವಸ್ಥೆಗಳ ಬಗ್ಗೆ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಶಾಸಕ ಕೆ.ರಘುಪತಿ ಭಟ್, ಡಿಎಚ್‌ಒ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ವೈದ್ಯಾಧಿಕಾರಿ ಡಾ.ಚಂದ್ರಶೇಖರ ಅಡಿಗ, ಡಾ.ಪ್ರಶಾಂತ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಶಿಖಾ ಗರ್ಗ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಿಆರ್‌ಎಸ್ ವೆಂಚರ್ಸ್ ಅಧ್ಯಕ್ಷ ಡಾ.ಬಿ.ಆರ್.ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net