ಪಠ್ಯೇತರ ಚಟುವಟಿಕೆಗೂ ಪ್ರಾಮುಖ್ಯತೆ ನೀಡಿ; ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಲಹೆ

DC SPORTS DAY INNOGRATION
ತಿಕೋಟಾ ತಾಲೂಕಿನ ಅರಕೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತರ್ ಶಾಲೆ ಹಾಗೂ ಕಾಲೇಜುಗಳ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ ನೀಡಿದರು. ಜಿಪಂ ಸಿಇಒ ರಿಷಿ ಆನಂದ, ಐಆರ್‌ಬಿ ಕಮಾಂಡೆಂಟ್ ನಂದಕುಮಾರ, ಪ್ರಶಾಂತ ಪೂಜಾರಿ ಮತ್ತಿತರರಿದ್ದಾರೆ.
Published on

ವಿಜಯಪುರ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಆ ಮೂಲಕ ಸುಂದರ, ಭದ್ರ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳುವ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿದ್ಯಾರ್ಥಿಗಳಿಗೆ ಹೇಳಿದರು.

ತಿಕೋಟಾ ತಾಲೂಕಿನ ಅರಕೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಸವಿನೆನಪಿಗಾಗಿ ಆಯೋಜಿಸುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಅಂತರ್ ಶಾಲೆ ಹಾಗೂ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೆರಳು ನಮ್ಮನ್ನು ಹಿಂಬಾಲಿಸಿದಂತೆ ನಮ್ಮ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ. ಮೇಜರ್ ಧ್ಯಾನಚಂದ್ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರು ಹಾಕಿಯಲ್ಲಿ ತಮ್ಮದೇಯಾದ ಛಾಪು ಮೂಡಿಸಿ, ಹಾಕಿ ಮಾಂತ್ರಿಕರಾಗಿದ್ದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸಾಧನೆ ಅವಲೋಕಿಸಿ, ಅವರ ಸತತ ಶ್ರಮ ಕಠಿಣ ಅಭ್ಯಾಸಗಳಿಂದ ಮಾಡಿರುವ ಅವರ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೇರೆಣೆಯಾಗಿ ಪಡೆದು, ಸಾಧನಾ ಪಥದಲ್ಲಿ ಸಾಗಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.

ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈಯ್ಯಲು ಹಲವು ಅವಕಾಶ ಒದಗಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.

ಐಆರ್‌ಬಿ ಕಮಾಂಡೆಂಟ್ ನಂದಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಶಾಂತ ಪೂಜಾರಿ, ಅರಕೇರಿಯ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲೆ ರೇಖಾ ಬಾರ್ಕಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net