

ಹನೂರು: ಪಠ್ಯ ಪುಸ್ತಕದ ಕಲಿಕೆಯ ಜತೆಗೆ ಶಾಲಾ ಹಂತದಲ್ಲೇ ಮಕ್ಕಳು ಸಾಮಾನ್ಯ ಜ್ಞಾನವನ್ನು ಕಲಿಯುವಂತಾಗಬೇಕು. ಶಿಕ್ಷಕರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು.
ತಾಲೂಕಿನ ಬಸಪ್ಪನದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಕ್ಕಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಸಹಯೋಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ಸಹಕಾರಿಯಾಗಿದ್ದು, ಉತ್ತಮ ಕಾರ್ಯಕ್ರಮವಾಗಿದೆ. ಇದರಿಂದ ಮಕ್ಕಳು ಕಲಿಕೆಯಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಲು ಅನುಕೂಲವಾಗಿದೆ ಎಂದರು.
ಹನೂರು ಶೈಕ್ಷಣಿಕ ವಲಯದ ಶಾಲೆಗಳ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು ಸಹಕಾರ ನೀಡುತ್ತಿರುವುದು ಮೆಚ್ಚುಗೆಯ ಸಂಗತಿ. ಇದರಿಂದ ಶಾಲೆಗಳ ಅಭಿವೃದ್ಧಿಗೆ ವರದಾನವಾಗಿದೆ. ಹಾಗಾಗಿ ಇಂತಹ ಕಾರ್ಯಗಳು ಹೆಚ್ಚಾಗಬೇಕು. ತಾಲೂಕಿನ ಕೆಲ ಶಾಲೆಗಳಲ್ಲಿ ಮೂಲಸೌಕರ್ಯ ಇಲ್ಲದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಸದ್ಯದಲ್ಲೇ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಬಳಿಕ ಶಾಸಕರು ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸೇವಿಸಿದರು. ಬಿಇಒ ಗುರುಲಿಂಗಯ್ಯ, ತಾಪಂ ಇಒ ಉಮೇಶ್, ಗ್ರಾಪಂ ಅಧ್ಯಕ್ಷ ಮುತ್ತುರಾಜು, ಸದಸ್ಯ ಗುರು, ತಾಲೂಕು ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ಶಿಕ್ಷಣ ಸಂಯೋಜಕ ಅಶೋಕ್, ಪಿಡಿಒ ಮಾದೇಶ್, ಕಾರ್ಯದರ್ಶಿ ಪವನ್‌ಕುಮಾರ್, ಸಿಆರ್‌ಪಿ ಚಂದ್ರಶೇಖರ್, ಮುಖ್ಯ ಶಿಕ್ಷಕ ವೀರಪ್ಪ ಇದ್ದರು.