

ವಿಜಯಪುರ: ನರೇಗಾ ಯೋಜನೆಯಲ್ಲಿ ಹೆಚ್ಚಿಗೆ ಕೂಲಿಯಾಧಾರಿತ ಕಾಮಗಾರಿಗಳನ್ನು ಪ್ರಸ್ತಕ ವರ್ಷದ ಆರಂಭದಲ್ಲಿ ಕೈಗೊಂಡಲ್ಲಿ ನಂತರದ ದಿನಗಳಲ್ಲಿ ಸಾಮಗ್ರಿ ಆಧಾರಿತ ಕಾಮಗಾರಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ಜಿಲ್ಲೆಯ ತಾಳಿಕೋಟೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು. ಮೊದಲು ಕಲಕೇರಿ ಗ್ರಾಪಂ ಸದಸ್ಯರೊಂದಿಗೆ ಸಭೆ ನಡೆಸಿದ ಅವರು ನರೇಗಾ ಯೋಜನೆಯಲ್ಲಿ ಹೆಚ್ಚಿನ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮದ ನೈರ್ಮಲ್ಯ ಕುರಿತು ಹೆಚ್ಚಿನ ಕಾಳಜಿ ವಹಿಸಿ ಸ್ವಚ್ಛ ಗ್ರಾಮವನ್ನಾಗಿಸುವಲ್ಲಿ ಯೋಜನೆ ಸಿದ್ಧಪಡಿಸಿ ಕಾರ್ಯಗತಗೊಳಿಸಬೇಕು ಇದರ ಸಂಪೂರ್ಣ ಹೊಣೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹೊರಬೇಕು ಎಂದರು.
ಗ್ರಾಪಂ ತೆರಿಗೆ ವಸೂಲಿ ಅತ್ಯವಶ್ಯವಾಗಿದೆ. ಕರ ವಸೂಲಿಯ ನಿಗದಿತ ಗುರಿ ತಲುಪಲು ಗ್ರಾಮ ಪಂಚಾಯಿತಿ ಸದಸ್ಯರು ಸಂಪೂರ್ಣ ಸಹಕಾರ ನೀಡಬೇಕು ಎಂದರು.
ನಂತರ ಅಸ್ಕಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಕೆರೆ ಹೊಳೆತ್ತುವ ಕಾಮಗಾರಿ ವೀಕ್ಷಿಸಿದರು. ಇದೇ ವೇಳೆ ಕೂಲಿ ಕಾರ್ಮಿಕರ ಜತೆ ಮಾತುಕತೆ ನಡೆಸಿದ ಅವರು, ನರೇಗಾದಡಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬನಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಬೆಕಿನಾಳ ಗ್ರಾಪಂ ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.
ಕೃಷ್ಣ ಭಾಗ್ಯ ಜಲ ನಿಗಮದ ಅರಣ್ಯ ವಿಭಾಗದಿಂದ ಬನಹಟ್ಟಿ ಪಿಟಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ 2022ನೇ ಸಾಲಿನ ಮಳೆಗಾಲದಲ್ಲಿ ಕೈಗೆತ್ತಿಕೊಂಡಿರುವ ನೆಡುತೋಪು ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸರ್ಕಾರಿ ಶಾಲೆಗಳಲ್ಲಿ ಮತ್ತು ಖಾಲಿ ಸರ್ಕಾರಿ ಜಾಗದಲ್ಲಿ ಸಸಿ ನೆಡಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು.