

ಚಿಕ್ಕಮಗಳೂರು: ಶಾಲೆಗಳಲ್ಲಿ, ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ರಕ್ಷಣೆಗೆ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಸಂಬಂಧಪಟ್ಟ ಇಲಾಖಾಧಿಕಾರಿಗಳು ಒತ್ತು ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಸೂಚಿಸಿದರು.
ಜಿಪಂನಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ ಹಾಜರಾತಿ ಸಮರ್ಪಕ ನಿರ್ವಹಣೆ ಮಾಡಬೇಕು. ಯಾರೂ ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಬೆಳವಾಡಿ ರಿಜ್ವಾನ್ ಎಂಬ ವಿದ್ಯಾರ್ಥಿಗೆ ವರ್ಗಾವಣೆ ಪತ್ರ ನೀಡದಿರುವ ಕುರಿತು ಪಾಲಕರು ಮಕ್ಕಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳು ಮಾಹಿತಿ ಪಡೆದು ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶಾಲೆಯನ್ನು ಸಂಪರ್ಕಿಸಿ ವರ್ಗಾವಣೆ ಪತ್ರ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ, ಬಿಸಿಊಟ ಯೋಜನೆಯಡಿ ಪೌಷ್ಟಿಕ ಆಹಾರ ಪೂರೈಕೆ, ಮಕ್ಕಳಿಗೆ ಮೂಲ ಸೌಕರ್ಯಗಳನ್ನು ಆದ್ಯತೆ ಮೇರೆ ಒದಗಿಸಬೇಕು. ಮಕ್ಕಳ ಅನುಕೂಲಕ್ಕಾಗಿ 1098 ಹಾಗೂ 112 ಸಹಾಯವಾಣಿಗಳ ಅರಿವು ಮೂಡಿಸಬೇಕು. ಆಯಾಯ ವಸತಿ ಶಾಲೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ, ಶಾಲಾ ನಿರ್ವಹಣಾ ಸಮಿತಿಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು. ಆಯೋಗದಿಂದ ಭೇಟಿ ನೀಡಿದಾಗ ಮಕ್ಕಳಿಂದ ಯಾವುದೇ ರೀತಿ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಭೇಟಿ ನೀಡಿದ ಆಯೋಗದ ಸದಸ್ಯ ಮಂಜು ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದರು. ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಿ, ಸ್ವಚ್ಛತೆ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ಪದ್ಧತಿಗಳನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು, ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಸಮಿತಿ ರಚಿಸಿಕೊಂಡು ಬಾಲಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಬೇಕು. ಅವರಿಂದ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ದೂರು ದಾಖಲಿಸಬೇಕು ಎಂದು ತಾಕೀತು ಮಾಡಿದರು.
ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್ ಇತರರಿದ್ದರು.