

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಭಕ್ತರಿಗೆ ಹಿತಕರವಾಗುವಂತೆ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ತಾಲೂಕಿನ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪೌರ ಕಾರ್ಮಿಕರ ಕುಂದು ಕೊರತೆ ಸಭೆಯಲ್ಲಿ ಸಮಸ್ಯೆ ಆಲಿಸಿ ಅವರು ಮಾತನಾಡಿದರು.
ಮ.ಬೆಟ್ಟ ಪ್ರಸಿದ್ಧ ಧಾರ್ಮಿಕ ಪುಣ್ಯ ಕ್ಷೇತ್ರ. ಇತ್ತೀಚಿನ ದಿನಗಳಲ್ಲಿ ಇಲ್ಲಿಗೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಆದ್ದರಿಂದ ಸ್ವಚ್ಛತೆ ಕಾಪಾಡುವುದರ ಜತೆಗೆ ಭಕ್ತರಿಗೆ ಉತ್ತಮ ಪರಿಸರವನ್ನು ನಿರ್ಮಿಸುವುದು ಎಲ್ಲರ ಕರ್ತವ್ಯ. ಇದರಿಂದ ಶ್ರೀಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಸಮರ್ಪಕ ಕಸ ವಿಲೇವಾರಿಯಾಗಬೇಕು. ಶೌಚಗೃಹಗಳು ಸ್ವಚ್ಛತೆಯಿಂದ ಕೂಡಿರಬೇಕು. ನಿರ್ವಹಣೆ ಸಮರ್ಪವಾಗಿರಬೇಕು. ಮೇಲ್ವಿಚಾರಕರು ಆಗ್ಗಾಗ್ಗೆ ಸ್ಥಳಕ್ಕೆ ತೆರಳಿ ಸಿಬ್ಬಂದಿ ಕಾರ್ಯ ವೈಖರಿಯನ್ನು ಪರಿಶೀಲಿಸಬೇಕು. ದಿನಚರಿಯನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಬೇಕು. ಇದರಲ್ಲಿ ಯಾವುದೇ ನಿರ್ಲಕ್ಷೃ ಸಲ್ಲದು ಎಂದು ಸೂಚಿಸಿದರು.
ಇದೇ ವೇಳೆ ಪೌರ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕರು ಆದ್ಯತೆ ಮೇರೆಗೆ ನಿವೇಶನ ನೀಡಲು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರಿಗೆ ನಿರ್ದೇಶನ ನೀಡಿದರು. ಇನ್ನು ಮ.ಬೆಟ್ಟಕ್ಕೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಸೆಸ್ಕ್ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಎ.ಈ ರಘು, ಪಿಡಬ್ಲೂೃಡಿ ಎಇಇ ಚಿನ್ನಣ್ಣ, ಇಂಜಿನಿಯರ್ ಸಂತೋಷ್‌ಕುಮಾರ್, ಪೌರ ಕಾರ್ಮಿಕರ ಅಧ್ಯಕ್ಷ ಗೋವಿಂದ, ಪ್ರಾಧಿಕಾರದ ನೌಕರರು ಹಾಗೂ ಇನ್ನಿತರರು ಇದ್ದರು.