ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದು ಕಡ್ಡಾಯ

15 HANUR 1
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು : ಮಕ್ಕಳಿಗೆ ಮೊಟ್ಟೆಯನ್ನು ಕಡ್ಡಾಯವಾಗಿ ನೀಡುವುದರ ಜತೆಗೆ ಅಕ್ಷರ ದಾಸೋಹದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ರೇವಣ್ಣ ಸೂಚನೆ ನೀಡಿದರು.

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಪೌಷ್ಠಿಕತೆ ಹೆಚ್ಚಿಸುವ ಸಲುವಾಗಿ ಸರ್ಕಾರ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಷನ್‌ನಿಂದ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ. ಈ ಸಂಬಂಧ ಫೌಂಡಷೇನ್ ತಂಡ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆಯನ್ನು ವಿತರಿಸದಿರುವುದು ಕಂಡು ಬಂದಿದೆ. ಈ ಸಂಬಂಧ ಬಿಇಒಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದ್ದರಿಂದ ಮಕ್ಕಳಿಗೆ ಕಡ್ಡಾಯವಾಗಿ ಮೊಟ್ಟೆ ವಿತರಿಸಬೇಕು ಎಂದು ತಿಳಿಸಿದರು.

ಮೊಟ್ಟೆ ಸೇವಿಸದ ಮಕ್ಕಳಿಗೆ ಕಡ್ಲೆಚಕ್ಕೆ ಅಥವಾ ಬಾಳೆಹಣ್ಣನ್ನು ನೀಡಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಇತ್ತ ಮೊಟ್ಟೆ ವಿತರಣೆಯ ದತ್ತಾಂಶವನ್ನು ಆನ್‌ಪೈನ್‌ನಲ್ಲಿ ಸರಿಯಾಗಿ ನಮೂದಿಸುತ್ತಿಲ್ಲ. ಇದರಿಂದ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ. ಸಮಸ್ಯೆಗಳೇನಾದರೂ ಇದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು.

ಇನ್ನು ಅಡುಗೆ ಕೋಣೆಯಲ್ಲಿ ಗ್ಯಾಸ್ ಸಿಲಿಂಡರ್ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಯಾವುದೇ ಅವಘಡಗಳು ಸಂಭವಿಸಿದಂತೆ ಎಚ್ಚರ ವಹಿಸಬೇಕು. ಆಹಾರ ಪದಾರ್ಥಗಳ ಬಗ್ಗೆ ಗಮನಹರಿಸಬೇಕು. ಪ್ರತಿ ಶಾಲೆಯಲ್ಲೂ ನೋಡೆಲ್ ಶಿಕ್ಷಕರೊಬ್ಬರನ್ನು ನಿಯೋಜಿಸುವುದರ ಮೂಲಕ ಅಕ್ಷರ ದಾಸೋಹದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯ ಶಿಕ್ಷಕರೇ ಹೊಣೆ:

ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಮಾತನಾಡಿ, ಎಸ್ಸಿ, ಎಸ್ಟಿ, ಒಬಿಸಿ ಹಾಗೂ ಅಲ್ಪ ಸಂಖ್ಯಾತರ ಮಕ್ಕಳಿಗೆ ಸರ್ಕಾರ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದೆ. ಆದರೆ ಕೆಲವು ಶಾಲೆಗಳಲ್ಲಿ ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಕೆಯಾಗದ ಹಿನ್ನೆಲೆ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿದೆ.

ಈ ಬಗ್ಗೆ ಪಾಲಕರಿಂದ ಆಕ್ಷೇಪ ಕೇಳಿ ಬಂದಿದೆ. ಆದ್ದರಿಂದ ಪ್ರತಿಯೊಬ್ಬರೂ ಸಂಬಂಧಪಟ್ಟವರಿಂದ ಸಮರ್ಪಕವಾಗಿ ಮಾಹಿತಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ನಿಖರವಾಗಿ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಇದರಲ್ಲಿ ನಿರ್ಲಕ್ಷ್ಯ ವಹಿಸಿದರೆ ಮಕ್ಕಳಿಗೆ ವಿದ್ಯಾರ್ಥಿ ವೇತನ ಮಂಜೂರಾಗುವುದಿಲ್ಲ. ಈ ಸಂಬಂಧ ಮುಖ್ಯ ಶಿಕ್ಷಕರೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದರು.

ಇದೇ ವೇಳೆ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಇನ್ನಿತರೆ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಬಿಆರ್‌ಪಿ ಚಂದ್ರುಶೇಖರ್, ಶಿಕ್ಷಣ ಸಂಯೋಜಕರಾದ ಅಶೋಕ್, ಮಹೇಶ್, ಚಿನ್ನಪ್ಪಯ್ಯ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net