

ಕೆ.ಆರ್.ಪೇಟೆ: ಗ್ರಾಮೀಣ ಪ್ರದೇಶದ ಮಹಿಳೆಯರ ಕುರಿತು ಮಾಜಿ ಸಿಎಂ ಎಚ್‌ಡಿಕೆ ಹೇಳಿಕೆ ವಿರುದ್ಧ ಕೆ.ಆರ್.ಪೇಟೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಲೋಕಸಭೆ ಚುನಾವಣೆ ಉಸ್ತುವಾರಿ ಇಂದಿರಾ ಸತೀಶ ಬಾಬು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿದರು.
ಪಟ್ಟಣದ ಟಿ.ಬಿ.ವೃತ್ತದಲ್ಲಿ ಜಮಾಯಿಸಿದ ಮಹಿಳಾ ಕಾರ್ಯಕರ್ತೆಯರು ಎಚ್‌ಡಿಕೆ ವಿರುದ್ಧ ಘೋಷಣೆ ಕೂಗಿದರು. ನಂತರ ಇಂದಿರಾ ಸತೀಶಬಾಬು ಮಾತನಾಡಿ, ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿಗಳನ್ನು ಟೀಕಿಸುವ ನೆಪದಲ್ಲಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳನ್ನು ದಾರಿ ತಪ್ಪುತ್ತಿದ್ದಾರೆ ಎಂದು ಅಪಹಾಸ್ಯ ಮಾಡಿ ನಿಂಧಿಸಿರುವ ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದರು.
ಇಡೀ ದೇಶದಲ್ಲಿಯೇ ಮಾದರಿಯಾಗಿ ರೂಪಿಸಿ ಅನುಷ್ಠಾನಗೊಳಿಸಿರುವ ಕಾಂಗೆಸ್ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳನ್ನು ನಕಲು ಮಾಡಿರುವ ಕೇಂದ್ರದ ನರೇಂದ್ರ ಮೋದಿಜೀ ಸರ್ಕಾರ ರಾಜ್ಯದ ಗ್ಯಾರಂಟಿ ಕಾರ್ಯಕ್ರಮಗಳ ಜನಪ್ರಿಯತೆಯಿಂದ ಭಯಗೊಂಡಿದೆ. ರಾಜ್ಯದ ಹೆಣ್ಣುಮಕ್ಕಳು ಗ್ಯಾರಂಟಿ ಕಾರ್ಯಕ್ರಮಗಳನ್ನು ಬೆಂಬಲಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸುವ ಮೂಲಕ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಸೋಲಿನ ಕಹಿ ಉಣಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಇಂದಿರಾ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ, ಕಾಂಗ್ರೆಸ್ ಮುಖಂಡರಾದ ಆದಿಹಳ್ಳಿ ಮೀನಾಕ್ಷಿ, ಶಿವಮ್ಮ, ಪುರಸಭೆ ಮಾಜಿ ಅಧ್ಯಕ್ಷೆ ಶಕುಂತಲಾ, ರತ್ನಮ್ಮ ಬೊಮ್ಮೆನಹಳ್ಳಿ ಲಲಿತಾ, ಸೌಭಾಗ್ಯ, ಸುಗುಣ ರಮೇಶ್, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಾಜಶೇಖರ್ ಸೇರಿದಂತೆ ನೂರಾರು ಮಹಿಳೆಯರು ಗೋ ಬ್ಯಾಕ್ ಕುಮಾರಸ್ವಾಮಿ, ಕುಮಾರಸ್ವಾಮಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.