

ಹೊನ್ನಾಳಿ: ಕ್ಷೇತ್ರದ 47 ಗ್ರಾಪಂಗಳ ವ್ಯಾಪ್ತಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದ್ದು, ಸಮಯಕ್ಕೆ ಸರಿಯಾಗಿ ಕೂಲಿ ಹಣ ಪಾವತಿಸುವಂತೆ ಗ್ರಾಪಂ ಅಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಆರುಂಡಿ ಗ್ರಾಮದಲ್ಲಿ ನರೇಗಾದಡಿ 20 ಲಕ್ಷ ರೂ. ವೆಚ್ಚದಲ್ಲಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ, ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಮಾತನಾಡಿದರು.
ಕರೊನಾ ಭೀತಿಯಿಂದ ದೇಶವೇ ಲಾಕ್‌ಡೌನ್ ಆಗಿ ಬಡವರು, ಕೂಲಿ ಕಾರ್ಮಿಕರು ಜೀವನ ನಡೆಸುವುದೇ ದುಸ್ತರವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ನರೇಗಾ ಕಾಮಗಾರಿಗೆ ವಿಶೇಷ ಅನುಮತಿ ನೀಡಿದೆ. ಆರುಂಡಿ ಗ್ರಾಮದ ಕೆರೆ ಹೂಳೆತ್ತುವ ಕಾಮಕಗಾರಿಗೆ 6400 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ತಿಳಿಸಿದರು.
ಕಾಮಗಾರಿ ಸ್ಥಳದಲ್ಲಿ ಕೂಲಿಕಾರರ ರಕ್ಷಣೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಸರ್ಜಿಕಲ್ ಮಾಸ್ಕ್, ಸ್ಯಾನಿಟೈಸರ್, ಶುದ್ಧ ಕುಡಿವ ನೀರು, ನೆರಳಿನ ವ್ಯವಸ್ಥೆ ಮಾಡಲು ಅಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಸಿಎಂ ಬಿ.ಎಸ್. ಯಡಿಯೂರಪ್ಪ ಕರೊನಾ ಸೋಂಕು ತಡೆಗೆ ಅನೇಕ ದಿಟ್ಟ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಲ್ಲಿ ಸೋಂಕು ಪೀಡಿತರಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ 11ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.