

ಮಂಡ್ಯ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅ.28ರಂದು ಜಿಲ್ಲೆಯಲ್ಲಿ ಸುವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸುವುದು ಸಹ ಶೈಕ್ಷಣಿಕ ಕಾರ್ಯಚಟುವಟಿಕೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಅ.24ರಂದು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಜಾಗೃತಿ ಜಾಥಾ ನಡೆಸಲಾಗುವುದು. ಅಂತೆಯೇ ಅ.27 ರಂದು ಪ್ರಬಂಧ ಸ್ಪರ್ಧೆ ಹಾಗೂ ಜಾಗೃತಿ ಜಾಥಾ ಆಯೋಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ, ಬಂದೋಬಸ್ತ್ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. 28ರಂದು ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಸುವರ್ಣ ಮಹೋತ್ಸವದ ಅಂಗವಾಗಿ ಪರಿಸರ ನೈರ್ಮಲ್ಯತೆ ಹಾಗೂ ಆರೋಗ್ಯ, ಹಸಿರಿನಿಂದ ಹುಸಿರು, ವರ್ತೂಲ ಆರ್ಥಿಕತೆ, ಸುಸ್ಥಿರ ಅಭಿವೃದ್ಧಿ ವಿಷಯ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಗುವುದು. ಇದಲ್ಲದೆ ಚರ್ಚಾಸ್ಪರ್ಧೆ, ಆಶು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಆಯೋಜನೆ ಮಾಡಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡುವ ಕುರಿತು ಜಾಗೃತಿ ಮೂಡಿಸಲು ಪ್ರತಿ ತಾಲೂಕುಗಳಿಗೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶಾದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ವಿಶ್ವನಾಥ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಪ್ರತೀಕ್, ಪೌರಾಯುಕ್ತೆ ಪಂಪಶ್ರೀ, ಡಿಡಿಪಿಐ ಲೋಕೇಶ್, ಡಿಡಿಪಿಯು ಸಿ.ಚಲುವಯ್ಯ ಇತರರಿದ್ದರು.