

ಚನ್ನಪಟ್ಟಣ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಶನಿವಾರ ಬೆಂಗಳೂರಿನ ಆರ್.ಆರ್.ನಗರದ ಖಾಸಗಿ ಕಾಲೇಜಿನಲ್ಲಿ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು.
ಮಳೂರು, ಅಕ್ಕೂರು, ಕೋಡಂಬಳ್ಳಿ, ಹೊಂಗನೂರು, ಬೇವೂರು ಜಿಪಂ ವ್ಯಾಪ್ತಿ ಹಾಗೂ ಚನ್ನಪಟ್ಟಣ ನಗರ ವ್ಯಾಪ್ತಿಯ ಪ್ರತ್ಯೇಕ ಸಭೆ ನಡೆಸಿದ ಅವರು, ಚುನಾವಣೆಗೆ ಸಂಬಂಧಿಸಿದ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಹಲವು ಕಾರ್ಯಕರ್ತರು ಡಿ.ಕೆ. ಸುರೇಶ್ ಸ್ಪರ್ಧೆಗೆ ಮನವಿ ಮಾಡಿದರು. ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು.
ನಾನೇ ಅಭ್ಯರ್ಥಿ!
ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಬಗ್ಗೆ ಯಾರು ತಲೆಕೆಡಿಸಿಕೊಳ್ಳಬೇಡಿ. ಈ ಚುನಾವಣೆಯಲ್ಲಿ ನಿಮ್ಮ ಡಿಕೆಶಿನೇ ಅಭ್ಯರ್ಥಿ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅರೆಕ್ಷಣ ಮೈ ಮರೆಯದೇ ಚುನಾವಣೆ ಎದುರಿಸಬೇಕು. ಚನ್ನಪಟ್ಟಣ ಕಾಂಗ್ರೆಸ್‌ಗೆ ಇದೊಂದು ಸುವರ್ಣಾವಕಾಶ. ಈ ಅವಕಾಶ ಬಳಸಿಕೊಂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಆಯ್ಕೆಯಾಗಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕರೆನೀಡಿದರು.
ಸರ್ಕಾರದ ಸಾಧನೆ ಮನೆ, ಮನ ಮುಟ್ಟಿಸಿ!
ಕಾಂಗ್ರೆಸ್ ನುಡಿದಂತೆ ನಡೆದಿದೆ. ಚುನಾವಣೆಯಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ನೀಡಿರುವ ಕೀರ್ತಿ ನಮ್ಮ ಪಕ್ಷಕ್ಕಿದೆ. ಪಕ್ಷದ ಕಾರ್ಯಕರ್ತರು ಈ ಚುನಾವಣೆಯಲ್ಲಿ ಸೈನಿಕರಂತೆ ಕೆಲಸ ಮಾಡಬೇಕು. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಕ್ರಮಗಳನ್ನು ಕ್ಷೇತ್ರದ ಪ್ರತಿ ಮನೆ ಹಾಗೂ ಮನಗಳಿಗೆ ಮುಟ್ಟಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ. ವಿರೋಧ ಪಕ್ಷಗಳು ಯಾವ ತಂತ್ರ ಹೆಣೆದರೂ ಚನ್ನಪಟ್ಟಣ ಕ್ಷೇತ್ರ ಈ ಬಾರಿ ಕಾಂಗ್ರೆಸ್ ವಶವಾಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಕ್ಷೇತ್ರದಲ್ಲಿ ಗೆಲುವಿಗೆ ಪೂರಕವಾದ ವಾತಾವರಣವಿದೆ. ಜೆಡಿಎಸ್ ಹಾಗೂ ಬಿಜೆಪಿಯಿಂದ ಬೇಸತ್ತಿರುವ ಕ್ಷೇತ್ರದ ಜನರು ಕಾಂಗ್ರೆಸ್‌ನತ್ತ ಒಲವು ಇಟ್ಟುಕೊಂಡಿದ್ದಾರೆ. ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಅಭೂತಪೂರ್ವವಾಗಿ ಗೆಲ್ಲಿಸುವುದೆ ಪ್ರತಿಯೊಬ್ಬರ ಗುರಿಯಾಗಿರಬೇಕು ಎಂದರು.
ಸಭೆಯಲ್ಲಿ ಕುಣಿಗಲ್ ಶಾಸಕ ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್.ರವಿ, ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕ ಎಂ.ಸಿ.ಅಶ್ವತ್ಥ್, ಪಕ್ಷದ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಮುಖಂಡರಾದ ದುಂತೂರು ವಿಶ್ವನಾಥ್, ಎಸ್.ಆರ್.ಪ್ರಮೋದ್, ಸುನೀಲ್ ಮತ್ತಿತರರಿದ್ದರು.