

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರ್ಕಾರಿ ಪ್ರೌಢಶಾಲೆ ಗೋಳ್ತಮಜಲು ಸಂಯುಕ್ತ ಆಶ್ರಯದಲ್ಲಿ, ಗೋಳ್ತಮಜಲು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು.
ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಭಾಗವಹಿಸಿ ಮಾತನಾಡಿ, ಕೆಟ್ಟ ಕುತೂಹಲಕ್ಕೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಿ ಎಂದರು.
ಮುಖ್ಯ ಶಿಕ್ಷಕ ರಮೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ಸದಸ್ಯ ಚಿನ್ನಾ ಕಲ್ಲಡ್ಕ, ಶಿಕ್ಷಕಿ ಶಶಿಕಲಾ, ಯೋಜನೆಯ ಗದಗ ಜಿಲ್ಲಾ ತರಬೇತಿ ಮೇಲ್ವಿಚಾರಕಿ ಹೇಮಲತಾ ಉಪಸ್ಥಿತರಿದ್ದರು. ಶಿಕ್ಷಕಿ ಸುನಿತಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ವಿದ್ಯಾ ವಂದಿಸಿದರು. ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.