ಮತಗಟ್ಟೆ ಸುಸ್ಥಿತಿ; ಖಾತರಿ ಪಡಿಸಿ: ಜಿಲ್ಲಾಧಿಕಾರಿ

8adarshkdga4
Published on

ಮಡಿಕೇರಿ: ಮತಗಟ್ಟೆ ಸುಸ್ಥಿತಿ ಕುರಿತು ಮಾಹಿತಿ ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅಧಿಕಾರಿಗಳಿಗೆ ಸೂಚಿಸಿದರು.


ನಗರದ ಜಿ.ಪಂ.ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಮತಗಟ್ಟೆಗಳ ಸುಸ್ಥಿತಿ ಸಂಬಂಧ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳೊಂದಿಗೆ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾಹಿತಿ ಮಾತನಾಡಿದರು.


ಜಿಲ್ಲೆಯಲ್ಲಿ ೫೪೨ ಮತಗಟ್ಟೆಗಳಿದ್ದು, ಮತಗಟ್ಟೆ ಸುಸ್ಥಿತಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸೆಕ್ಟರ್ ವ್ಯಾಪ್ತಿಯಲ್ಲಿ ಅತೀ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು.


ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ಮತಗಟ್ಟೆ ಸುಸ್ಥಿತಿ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ವಲ್ನರಬಲ್ ಮತ್ತು ಕ್ರಿಟಿಕಲ್ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು. ಅಂತರ ರಾಜ್ಯ ಮತ್ತು ಅಂತರ್ ಜಿಲ್ಲಾ ಚೆಕ್‌ಪೋಸ್ಟ್‌ಗಳ ಬಗ್ಗೆ ನಿಖರ ವರದಿ ನೀಡಬೇಕು. ಈ ಚೆಕ್ ಪೋಸ್ಟ್‌ಗಳಲ್ಲಿ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.


ಈಗಾಗಲೇ ವಿದ್ಯುನ್ಮಾನ ಮತಯಂತ್ರ ಬಂದಿದ್ದು, ಪ್ರಥಮ ಹಂತದ ಪರಿಶೀಲನಾ ಕಾರ್ಯ ನಡೆದಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಡೆಮೋಸ್ಟ್ರೇಷನ್ ಮೂಲಕ ಮಾಹಿತಿ ನೀಡಬೇಕು. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹಾಗೂ ಮತಗಟ್ಟೆ ಸ್ಥಳದ ಮತದಾರರಿಗೆ ಮಾಹಿತಿ ನೀಡುವುದು. ಭಾವಚಿತ್ರವಿರುವ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಮತದಾರರಿಗೆ ಖಾತರಿ ಪಡಿಸುವುದು ಸೇರಿದಂತೆ ಮತ್ತಿತರ ಕೆಲಸ ಮಾಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಸೂಚಿಸಿದರು.


ಸೆಕ್ಟರ್ ಅಧಿಕಾರಿಗಳು ಮಾಹಿತಿ ನೀಡಿ, ಕೆಲವು ಮತಗಟ್ಟೆಗಳಲ್ಲಿ ಕುಡಿಯುವ ನೀರು ಕಲ್ಪಿಸಬೇಕು. ಶೌಚಾಲಯ ಸರಿಪಡಿಸಬೇಕು. ಕಟ್ಟಡ ರಿಪೇರಿ, ಬಾಗಿಲು, ಕಿಟಕಿ, ವಿದ್ಯುತ್ ಸಂಪರ್ಕ, ಗೋಡೆ ಬಿರುಕು, ರಸ್ತೆ ಸರಿ ಮಾಡುವುದು ಇತರೆ ಕಾರ್ಯಗಳು ಆಗಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಅವರ ಗಮನಕ್ಕೆ ತಂದರು.


ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಶಾಲಾ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳನ್ನು ಸುಸ್ಥಿತಿಯಲ್ಲಿ ಇಡುವ ಸಂಬಂಧ ಪಟ್ಟಿಮಾಡಿ ಸರ್ಕಾರಕ್ಕೆ ಕಳುಹಿಸಿದ್ದಲ್ಲಿ ಅನುದಾನ ಬಿಡುಗಡೆಯಾಗಲಿದೆ. ಇದನ್ನು ಬಳಸಿ ಮತಗಟ್ಟೆಗಳನ್ನು ಸರಿಪಡಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ವಿಧಾನಸಭಾ ಚುನಾವಣೆ ಸಂಬಂಧ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತದ ಜತೆ ಸದಾ ಕೈಜೋಡಿಸಲಿದೆ ಎಂದರು.


ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್(ಮಡಿಕೇರಿ ವಿಧಾನಸಭಾ ಕ್ಷೇತ್ರ), ಶಬಾನಾ ಎಂ.ಷೇಕ್(ವಿರಾಜಪೇಟೆ ವಿಧಾನಸಭಾ ಕ್ಷೇತ್ರ), ತಹಶೀಲ್ದಾರರಾದ ಎಸ್.ಎನ್.ನರಗುಂದ, ಪ್ರಕಾಶ್, ಅರ್ಚನಾ ಭಟ್, ಕಿರಣ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net