ಅಧಿಕಾರದ ಉದ್ದೇಶ ನಿಯಂತ್ರಣವಲ್ಲ, ಸಾರ್ಥಕತೆಯ ಸಾಧನ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ

Good Governance DCM Dr Ashwath Narayana
Published on

ಬೆಂಗಳೂರು: ಅಧಿಕಾರದ ಉದ್ದೇಶ ಯಾರನ್ನಾದರೂ ನಿಯಂತ್ರಿಸುವುದಿಲ್ಲ. ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಂಡು ಸಾರ್ಥಕತೆ ಹೊಂದಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸಲಹೆ ನೀಡಿದರು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ಜನ್ಮ ದಿನದ ನಿಮಿತ್ತ‌ ಶುಕ್ರವಾರ ಏರ್ಪಡಿಸಿದ್ದ 'ಉತ್ತಮ ಆಡಳಿತ ದಿನ'ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜವಾಬ್ದಾರಿ ಅರಿತು ನಿರಂತರ ಪರಿಶ್ರಮ, ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಮೂಲಕ ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ. ಸವಾಲು, ಸಮಸ್ಯೆಗಳಿಗೆ ಬೆನ್ನು ತೋರಿಸದೆ ಅವುಗಳನ್ನು ಮೆಟ್ಟಿ ನಿಲ್ಲುವ ಶಕ್ತಿ-ಸಾಮರ್ಥ್ಯ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ. ತಂಡ ಸ್ಫೂರ್ತಿಯಿಂದ ಕೆಲಸ, ಒಳ್ಳೆಯ ನಿರ್ಧಾರಗಳ ಸಕಾಲಿಕ ಅನುಷ್ಠಾನದಿಂದ ಉತ್ತಮ ಆಡಳಿತದ ಗುರಿ ತಲುಪಲು ಸಾಧ್ಯವಿದೆ. ವಿಶ್ವಮಾನ್ಯ, ಗೌರವ ಹಾಗೂ ವಿಶ್ವಾಸ ಸಂಪಾದಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಎಲ್ಲ ಕಾಲಕ್ಕೂ ಪ್ರಸ್ತುತ. ಅವರ ಸೇವಾ ಮನೋಭಾವ, ವಿಚಾರಗಳು ಸದಾ ಪ್ರೇರಣೆ ನೀಡುತ್ತವೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಐಟಿ-ಬಿಟಿ ಇಲಾಖೆಯ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಆಯಾ ಇಲಾಖೆಯ ಉಪ ಕ್ರಮಗಳನ್ನು ಪ್ರಸ್ತುತಪಡಿಸಿದರು. ಐಟಿ-ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net