

ಕುಂದಾಪುರ: ನಮ್ಮ ಆಹಾರಗಳೇ ನಮ್ಮ ಆರೋಗ್ಯಕ್ಕೆ ಮೂಲವಾಗಿದೆ. ಪ್ರಾಕೃತಿಕವಾಗಿ ಸಿಗುವ ತರಕಾರಿ, ಹಣ್ಣುಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ನಿಯಮಿತವಾಗಿ ವೈದ್ಯರ ಸಲಹೆ, ಔಷಧೋಪಚಾರ ಪಡೆಯಬೇಕು. ಸ್ವಯಂ ಚಿಕಿತ್ಸೆ ಅಪಾಯಕಾರಿ ಎಂದು ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಘವೇಂದ್ರ ಹೆಬ್ಬಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಗ್ರಾಪಂ ಮಟ್ಟದ ಸಮೃದ್ಧಿ ಸಂಜೀವಿನಿ ಒಕ್ಕೂಟ ಮತ್ತು ಬೀಜಾಡಿ ಗ್ರಾಪಂ ಸಹಯೋಗದಲ್ಲಿ ಬೀಜಾಡಿಯ ಮಿತ್ರಸೌಧ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಆಹಾರ, ಪೌಷ್ಟಿಕತೆ, ಆರೋಗ್ಯ, ನೀರು, ನೈರ್ಮಲ್ಯ ಮತ್ತು ಶುಚಿತ್ವ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಬೀಜಾಡಿ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಜಿ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷೆ ನಾಗರತ್ನಾ ಜಿ., ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಅಶ್ವಿನಿ, ಪಂಚಾಯಿತಿ ಸದಸ್ಯರು, ಸಿಬ್ಬಂದಿ ಮತ್ತು ಒಕ್ಕೂಟದ ಕಾರ್ಯದರ್ಶಿ ಆರತಿ, ಎಲ್‌ಸಿಆರ್‌ಪಿ, ಎಂಬಿಕೆ, ಕೃಷಿ ಸಖಿ, ಪಶು ಸಖಿ ಮತ್ತಿತರರು ಉಪಸ್ಥಿತರಿದ್ದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ ಸಮಗ್ರ ಸುಸ್ಥಿರ ಅಭಿವೃದ್ಧಿ ಯೋಜನೆ ಬಗ್ಗೆ, ವಲಯ ಮೇಲ್ವಿಚಾರಕಿ ಮಮತಾ ಅವರು ಮಹಿಳೆಯರಿಗೆ ಸಿಗುವ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.