ಸತತ ಅಭ್ಯಾಸದಿಂದ ಉತ್ತಮ ಫಲಿತಾಂಶ

12MDG2 SHISHYA VETANA
Published on

ಮುಂಡರಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀಡಲಾಗುವ ಶಿಷ್ಯ ವೇತನ ಪಡೆಯುವ ವಿದ್ಯಾರ್ಥಿಗಳು ಸತತವಾಗಿ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಸೋಮವಾರ ಹಮ್ಮಿಕೊಂಡಿದ್ದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಹಾಗೂ ಜನಮಂಗಳದಡಿ ಮಂಜೂರಾದ ಸಲಕರಣೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಮುಂಡರಗಿ ಮಂಡಲ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಮಾತನಾಡಿ, ನಮ್ಮೊಳಗೆ ಆತ್ಮವಿಶ್ವಾಸ ಹೊಂದಿ ಮುನ್ನಡೆದರೆ ಯಶಸ್ಸು ದೊರೆಯುತ್ತದೆ. ವಿದ್ಯಾರ್ಥಿಗಳು ಇಂತಹ ಯೋಜನೆಯ ಉಪಯೋಗ ಪಡೆದು ಜೀವನದಲ್ಲಿ ಸಾಧನೆ ಮಾಡಬೇಕು ಎಂದರು.

ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ನಿರ್ದೇಶಕ ಯೋಗೀಶ ಎ. ಮಾತನಾಡಿ, ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 1032 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುತ್ತಿದೆ. ರಾಜ್ಯದಲ್ಲಿ 15 ವರ್ಷಗಳಿಂದ 96,894 ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆದಿದ್ದಾರೆ. ಈವರೆಗೂ 114 ಕೋಟಿ ರೂ. ಶಿಷ್ಯವೇತನಕ್ಕೆ ಅನುದಾನ ನೀಡಲಾಗಿದೆ. ತಾಂತ್ರಿಕ ಶಿಕ್ಷಣ ಪಡೆಯುವಂತ ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಜನ ಜಾಗೃತಿ ವೇದಿಕೆ ಕೋಶಾಧಿಕಾರಿ ಎ.ಕೆ. ಮುಲ್ಲಾನವರ ಮಾತನಾಡಿದರು. ಪುರಸಭೆ ಸದಸ್ಯ ನಾಗೇಶ ಹುಬ್ಬಳ್ಳಿ, ಬಿಇಒ ಎಚ್.ಎಂ. ಫಡ್ನೇಶಿ, ಕ್ಷೇತ್ರ ಸಮನ್ವಯಾಧಿಕಾರಿ ಗಂಗಾಧರ ಅಣ್ಣಿಗೇರಿ, ತಾಲೂಕು ಯೋಜನಾಧಿಕಾರಿ ವಿಶಾಲಾ ಮಲ್ಲಾಪೂರ, ಪ್ರಗತಿ ಬಂಧು, ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಂಬಳ ಮೇಲ್ವಿಚಾರಕ ಅಣ್ಣಪ್ಪ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net