ಬೆಂಗಳೂರಿನಲ್ಲಿ ಫೆ.27 ರಂದು ಸರ್ಕಾರಿ ನೌಕರರ ಸಮ್ಮೇಳನ

government employees sammelana
Published on

ಮೈಸೂರು: ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಫೆ.27ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ತಿಳಿಸಿದರು.

7ನೇ ವೇತನ ಆಯೋಗದ ವರದಿ ಅನುಷ್ಠಾನ, ಹಳೆಯ ಪಿಂಚಣಿ ಯೋಜನೆ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆಗೆ ಒತ್ತಾಯಿಸಿ ಮಹಾಸಮ್ಮೇಳನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಬೆಂಗಳೂರು ನಗರ ಮತ್ತು ಜಿಲ್ಲೆ ಹೊರತು ಪಡಿಸಿ ಈ ಸಮ್ಮೇಳನದಲ್ಲಿ ಭಾಗವಹಿಸುವ ಉಳಿದ ಎಲ್ಲ ಜಿಲ್ಲೆಗಳ ನೌಕರರಿಗೆ ಫೆ.27, 28 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಿಂದ 8 ರಿಂದ 10 ಸಾವಿರ ನೌಕರರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಜಾಸ್ನೇಹಿ ಕಾರ್ಯಾಗಾರಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಕೃಷ್ಣ ಎಸ್.ದೀಕ್ಷಿತ್ ಅವರು ಚಾಲನೆ ನೀಡಲಿದ್ದಾರೆ. ನೌಕರರ ಆರೋಗ್ಯ ಮತ್ತು ಒತ್ತಡ ನಿರ್ವಹಣೆಯ ಬಗ್ಗೆ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಕಾರ್ಯಾಗಾರ ನಡೆಸಿಕೊಡುವರು. ಸಮ್ಮೇಳನವನ್ನು ಮುಖ್ಯಮಂತ್ರಿ ಸಿರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ರೇವಣ್ಣ, ರಮೇಶ್ ಕುಮಾರ್, ಸುರೇಶ್, ಗಿರೀಶ್, ಶ್ರೀನಿವಾಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net