

ಕಡೂರು:ದೇಶಿ ಕ್ರೀಡೆಗಳಿಗೆ ಒತ್ತು ನೀಡುವ ಮೂಲಕ ಕ್ರೀಡಾಪಟುಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವ ಶಕ್ತಿ ಕಡೂರಿನ ಮಣ್ಣಿಗಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕಬ್ಬಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದಲ್ಲಿ ಈ ಹಿಂದೆ ಕುಸ್ತಿ, ವಾಲಿಬಾಲ್‌ನಂತಹ ಕ್ರೀಡೆಗಳನ್ನು ರಾಜ್ಯಮಟ್ಟದಲ್ಲಿ ಸತತವಾಗಿ ಗೆಲುವು ಸಾಧಿಸುತ್ತಾ ಕಡೂರಿನ ಕೀರ್ತಿ ಹೆಚ್ಚಿಸುತ್ತಿದೆ. ಅದೇ ರೀತಿ ಇಂದಿಗೂ ಕ್ರೀಡೆಗೆ ಹೆಚ್ಚಿನ ಮನ್ನಣೆ ನೀಡಬೇಕು ಎಂಬ ಹಿನ್ನಲೆಯಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಸಹಕಾರ ನೀಡಲಾಗುತ್ತಿದೆ. ಇದಕ್ಕೆ ಬಯಲುಸೀಮೆ ಭಾಗದ ಮಣ್ಣಿನ ಗುಣದ ವಿಶೇಷತೆಗೆ ಹೆಚ್ಚು ಮಹತ್ವ ಪಡೆದುಕೊಂಡಿದೆ ಎಂದರು.
ಕಬ್ಬಡಿ ಆಟ ನಮ್ಮ ಗ್ರಾಮೀಣ ಸೊಗಡಿನ ಕ್ರೀಡೆಯಾಗಿ ಎಲ್ಲರ ಒಗ್ಗಟ್ಟನ್ನು ಪ್ರದರ್ಶಿಸುತ್ತದೆ. ಇತ್ತೀಚೆಗೆ ಕಬ್ಬಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದುಕೊಂಡಿರುವುದು ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚು ಉತ್ತೇಜನ ನೀಡಿದಂತಾಗುತ್ತಿದೆ. ಅಂಬೇಡ್ಕರ್ ಕ್ರೀಡಾಂಗಣದ ಅಭಿವೃದ್ಧಿಗೆ ಪುರಸಭೆ ವ್ಯಾಪ್ತಿಯಲ್ಲಿ ಹೆಚ್ಚು ಒತ್ತು ನೀಡಲಾಗುವುದು. ದೇಶಿಯ ಕ್ರೀಡೆಗಳ ಆಯೋಜನೆಗೆ ಪುರಸಭೆಯಿಂದ ನಿರಂತರ ಸಹಕಾರ ನೀಡಲಾಗುವುದು ಎಂದರು.
ಜಿಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಭಾಗವಹಿಸುವಿಕೆಯ ಉತ್ಸಾಹ ಕಳೆದುಕೊಳ್ಳಬಾರದು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ತಮ್ಮ ಆಟದ ನಡುವೆ ಉತ್ತಮ ಬಾಂಧವ್ಯ ಬೆಸೆಯಲು ಕ್ರೀಡೆಗಳು ಹೆಚ್ಚು ಸಹಕಾರಿಯಾಗುತ್ತವೆ ಎಂದರು.