

ರಾಯಚೂರು: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಶೀಘ್ರದಲ್ಲಿ ಈ ಭಾಗದಲ್ಲಿ ಖಾಲಿಯಿರುವ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಾವು ಚುನಾವಣೆ ಮುಂಚೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ ಎಂದರು.
ಕಲ್ಯಾಣ ಕರ್ನಾಟಕ ಭಾಗವನ್ನು ನಿಜಾಮರ ಕಪಿಮುಷ್ಠಿಯಿಂದ ವಿಮೋಚನೆಗೊಳಿಸುವಲ್ಲಿ ಅನೇಕ ಮಹನೀಯರ ತ್ಯಾಗ, ಬಲಿದಾನದ ಜತೆಗೆ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯ್ ಪಟೇಲ್‌ರ ದಿಟ್ಟ ನಿರ್ಧಾರ ಕಾರಣವಾಗಿದೆ.
ಹಿಂದುಳಿದ ಈ ಭಾಗಕ್ಕೆ 371ಜೆ ತಿದ್ದುಪಡಿ ಮೂಲಕ ವಿಶೇಷ ಸ್ಥಾನಮಾನ ನೀಡಿದ್ದರಿಂದ ಹೆಚ್ಚಿನ ಸಹಕಾರಿಯಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಈ ಭಾಗದ ಯುವಜನರಿಗೆ ಮೀಸಲಾತಿ ದೊರೆಯುವುದರಿಂದ ಉನ್ನತ ಹುದ್ದೆ ಪಡೆಯಲು ಸಾಧ್ಯವಾಗಲಿದೆ.
ಅಕಾರಿಗಳು 371ಜೆ ಮಹತ್ವ ಮತ್ತು ಪ್ರಯೋಜನ ಕುರಿತು ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡುವ ಕೆಲಸವಾಗಬೇಕಾಗಿದೆ. ಅಕಾರಿಗಳು ಈ ನಿಟ್ಟಿನಲ್ಲಿ ಮಕ್ಕಳಿಗೆ ವಿಶೇಷ ಉಪನ್ಯಾಸ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಬೇಕು.
ನಗರದಲ್ಲಿ 2 ಸಾವಿರ ಆಸನ ವ್ಯವಸ್ಥೆಯಿರುವ ಸುಸಜ್ಜಿತ ರಂಗಮಂದಿರ ನಿರ್ಮಾಣ ಮಾಡುವ ಮೂಲಕ ಸಾಂಸ್ಕೃತಿಕ ಮತ್ತಿತರ ಕಾರ್ಯಕ್ರಮಗಳಿಗೆ ಅನುಕೂಲ ಕಲ್ಪಿಸಲಾಗುವುದು. ಅದಕ್ಕೆ ಸಂಬಂಸಿದಂತೆ ರೂಪರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್, ಸೇವಾದಳ ಸೇರಿದಂತೆ ವಿವಿಧ ತಂಡಗಳಿಂದ ಪಥ ಸಂಚಲನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ್, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಸಹಾಯಕ ಆಯುಕ್ತೆ ಮಹೆಬೂಬಿ ಉಪಸ್ಥಿತರಿದ್ದರು.