

ಮೈಸೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು ರಾಜ್ಯ ಬಿಜೆಪಿ ಸರ್ಕಾರವೇ ರಕ್ಷಣೆ ಮಾಡುತ್ತಿದೆ. ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವನನ್ನು ಬಂಧಿಸಲಿಲ್ಲವೇಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಆತ ಎಲ್ಲಿದ್ದಾನೆ ಎನ್ನುವುದು ಸರ್ಕಾರಕ್ಕೆ ಗೊತ್ತಿದೆ. ಅವನು ಅವನ ಮನೆಯಲ್ಲೇ ಓಡಾಡಿಕೊಂಡಿದ್ದಾನೆ. ಅವನನ್ನು ಬಂಧಿಸದೇ ಇವರು ನಾಟಕ ಮಾಡುತ್ತಿದ್ದಾರೆ. ಲುಕ್‌ಔಟ್ ನೋಟಿಸ್ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರಷ್ಟೆ ಎಂದು ಟೀಕಿಸಿದರು.
ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಾಗಲೆಲ್ಲಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಕ್ಷಿ ಕೇಳುತ್ತಿದ್ದರು. ಈಗ ಅವರದ್ದೇ ಪಕ್ಷದವರು ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅವರ ವಿರುದ್ಧ ಏನು ಕ್ರಮ ತೆಗೆದುಕೊಂಡಿದ್ದಾರೆ? ಇಷ್ಟೆಲ್ಲಾ ಆದರೂ ನಮಗೆ ಮುಜುಗರವಿಲ್ಲ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.