

ಹೊಳೆನರಸೀಪುರ : ಪಂಚ ಗ್ಯಾರಂಟಿಗಳಿಂದ ಸರ್ಕಾರ ಸುಭದ್ರವಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಘಟಕದ ಕಚೇರಿ ಉದ್ಘಾಟನೆ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದೆಯೇ ಎಂದು ನಿಗಾವಹಿಸಬೇಕು ಎಂದು ಸೂಚಿಸಿದರು.
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿದೆ. ಇದಕ್ಕೆ ಅಜೀಮ್ ಪ್ರೇಮ್ ಜೀ. ಅವರ ಕೊಡುಗೆ ಅಪಾರವಾಗಿದೆ. ಮಕ್ಕಳಿಗೆ ಬೆಳಗಿನ ಹಾಲು, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಶೂ ಸೇರಿದಂತೆ ಇತರೆ ಸವಲತ್ತುಗಳನ್ನು ಸರ್ಕಾರ ನೀಡುತ್ತಿದೆ ಎಂದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ರೂಪಿಸಿದೆ. ಆದರೆ ಸರ್ಕಾರಿ ಶಾಲೆಯ ಶಿಕ್ಷಕರುಗಳು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಲ್ಲಿ ಸೇರಿಸುತ್ತಿದ್ದಾರೆ. ತಾವು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ತಿಳಿಸಿದರು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಶಾಲೆಗಳು ದುರಸ್ತಿ ಕಂಡಿಲ್ಲ. ಈ ಬಗ್ಗೆ ಸಚಿವರು ಗಮನಹರಿಸಬೇಕೆಂದು ಕೋರಿದರು. ತಾಪಂ ಇಒ ಗಿರೀಶ್, ಡಿಡಿಪಿಐ ಎಚ್.ಕೆ.ಪಾಂಡು, ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿಯ ಅಧ್ಯಕ್ಷ ಶಿವಕುಮಾರ್ ಇತರರು ಇದ್ದರು.