

ಹನೂರು: ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಇರುವ ಪ್ರಮುಖ ಅಸ್ತ್ರವೆಂದರೆ ಅದು ಸಂಘಟನೆ. ಆದ್ದರಿಂದ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸನ್ನಗೌಡ ತಿಳಿಸಿದರು.
ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲೂರು ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರೈತರು ವಿದ್ಯುತ್ ಸಮಸ್ಯೆ, ಬೆಳೆಗಳಿಗೆ ನಿಗದಿತ ಬೆಲೆ ಸಿಗದಿರುವುದು, ಕಾಡು ಪ್ರಾಣಿಗಳ ಹಾವಳಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ, ಸರ್ಕಾರ ಹಾಗೂ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಇತ್ತ ಸರ್ಕಾರದ ಸವಲತ್ತುಗಳು ರೈತರಿಗೆ ಸಿಗುತ್ತಿಲ್ಲ. ಇದರಿಂದ ಕೃಷಿಯಲ್ಲಿ ಹಿನ್ನಡೆಯಾಗುತ್ತಿದ್ದು, ರೈತರು ತೊಂದರೆ ಅನುಭವಿಸುವಂತಾಗಿದೆ ಎಂದರು.
ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆಯಿಂದ ಮಾತ್ರ ಸಾಧ್ಯ. ನಮ್ಮ ಸಂಘಟನೆಯು ವ್ಯಕ್ತಿ ಅಧಾರಿತವಲ್ಲ. ರೈತರ ಸಮಸ್ಯೆಗಳನ್ನು ಬಗೆಹರಿಸುವುದರ ಜತೆಗೆ ಭ್ರಷ್ಟಾಚಾರ, ಅಕ್ರಮ ಚಟುವಟಿಕೆಗಳ ವಿರುದ್ಧ ಹೋರಾಟ ನಡೆಸುವ ಕ್ರೀಯಾಶೀಲ ಸಂಘ. ಹಾಗಾಗಿ ಗ್ರಾಮ ಘಟಕ ಉದ್ಘಾಟನೆಯಾಗಿರುವುದು ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ತಾಲೂಕು ಅಧ್ಯಕ್ಷ ಅಮ್ಜಾದ್ ಖಾನ್ ಮಾತನಾಡಿ, ಈ ಭಾಗದಲ್ಲಿ ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕೃಷಿ ಅಧಿಕಾರಿಗಳು ಭೇಟಿ ನೀಡದಿರುವುದು ವಿಪರ್ಯಾಸ. ಇತ್ತ ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಮರ್ಪಕ ಸವಲತ್ತುಗಳು ಸಿಗುತ್ತಿಲ್ಲ. ಆದ್ದರಿಂದ ಈ ಎಲ್ಲ ಸಮಸ್ಯೆಗಳಿಗೆ ಸಂಘಟನೆ ಮೂಲಕ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.
ಪದಾಧಿಕಾರಿಗಳ ಆಯ್ಕೆ: ಅಂಗುರಾಜು (ಗೌರವಾಧ್ಯಕ್ಷ), ಸೆಂದಿಲ್ (ಅಧ್ಯಕ್ಷ), ಕುಮಾರ್ (ಉಪಾಧ್ಯಕ್ಷ), ವಿಜಯಕುಮಾರ್ (ಕಾರ್ಯದರ್ಶಿ), ರವಿ (ಸಹ ಕಾರ್ಯದರ್ಶಿ), ಈಶ್ವರಮೂರ್ತಿ (ಖಜಾಂಚಿ) ಹಾಗೂ ಶಿವಕುಮಾರ್ (ಸಂಘಟನಾ ಕಾರ್ಯದರ್ಶಿ) ಅವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಶಾಂತಮಲ್ಲಪ್ಪ, ಉಪಾಧ್ಯಕ್ಷ ಗೌಡೇಗೌಡ, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಶಿವಮಲ್ಲು, ಹನೂರು ತಾಲೂಕು ಗೌರವಾಧ್ಯಕ್ಷ ರಾಜಣ್ಣ, ಕಾರ್ಯದರ್ಶಿ ಗೋಪಾಲ್, ಸಂಘಟನಾ ಕಾರ್ಯದರ್ಶಿ ಬಸವರಾಜು, ಯುವ ಘಟಕದ ಅಧ್ಯಕ್ಷ ಸೂರ್ಯ ಇನ್ನಿತರರಿದ್ದರು.