

ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.
ಮಹಾನಗರ ಪಾಲಿಕೆ, ತಾಪಂ, ಜಿಪಂ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅವಧಿ ಮುಗಿದ ಆರು ತಿಂಗಳೊಳಗೆ ನಡೆಸಬೇಕೆಂಬ ನಿಯಮವಿದೆ. ಸುಪ್ರೀಂ ಕೋರ್ಟ್‌ನ ಆದೇಶವೂ ಇದೆ. ಆದರೆ ಕಾಂಗ್ರೆಸ್ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಇವೆಲ್ಲವನ್ನೂ ಮೀರಿ ಚುನಾವಣೆ ನಡೆಸದೆ ಸಂವಿಧಾನ ವಿರೋಧಿಗಳಂತೆ ವರ್ತಿಸುತ್ತಿವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಚುನಾವಣಾ ಆಯೋಗವನ್ನು ಭೇಟಿ ಮಾಡಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ಮನವಿ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ಮೀಸಲಾತಿ ನೀಡಿಲ್ಲ ಎಂಬ ಉತ್ತರವನ್ನು ಆಯೋಗ ನೀಡಿದೆ. ಹಳೇ ಮೀಸಲಾತಿ ಪ್ರಕಾರವೇ ಚುನಾವಣೆ ನಡೆಸುವ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಆಯೋಗ ಭರವಸೆ ನೀಡಿದೆ. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಆಗ್ರಹಿಸಿದರು.
ಕಳೆದ ವರ್ಷ ಆ.8ರಂದು ಚುನಾವಣಾ ಆಯೋಗ ಶಿವಮೊಗ್ಗ ಮೈಸೂರು, ಶಿವಮೊಗ್ಗ ಸೇರಿ ಮೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುತ್ತೇವೆಂದು ಸರ್ಕಾರವೇ ಘೋಷಿಸಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತ ಮಂಡಳಿ ಇಲ್ಲದಿರುವುದರಿಂದ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ 18,948 ಕೋಟಿ ರೂ. ವಾಪಸ್ ಹೋಗುವ ಸಾಧ್ಯತೆ ಇದೆ. ಒಂದೆಡೆ ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ದೂರುವ ಸರ್ಕಾರ, ಮತ್ತೊಂದೆಡೆ ಬಂದಿರುವ ಅನುದಾನವನ್ನೂ ಬಳಸಿಕೊಳ್ಳುವಲ್ಲಿ ವಿಫಲವಾಗುತ್ತಿದೆ ಎಂದು ದೂರಿದರು.