

ರಾಯಚೂರು: ರಾಜ್ಯ ಶಿಕ್ಷಣ ನೀತಿಯಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ನಿರ್ವಹಣೆಯ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ತೆಗೆದುಕೊಳ್ಳಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಾರ್ಪೋರೇಟ್ ಕಂಪನಿಗಳ ಬಳಿ ಧನ ಸಹಾಯ ಪಡೆಯುವ ಬದಲು ಜನರ ತೆರಿಗೆ ಹಣದಲ್ಲಿಯೇ ಸರ್ಕಾರವೇ ನಿರ್ವಹಿಸಬೇಕು ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದರು.
ಸ್ಥಳೀಯ ಕನ್ನಡ ಭವನದಲ್ಲಿ ಎಐಡಿಎಸ್‌ಒದಿಂದ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನದಲ್ಲಿ ಮಾತನಾಡಿ, ಸರ್ಕಾರ ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳ ಹಣದ ಮೇಲೆ ಅವಲಂಬಿತವಾಗಬಾರದು ಎಂದರು.
ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದು ಹಾಗೂ ಮುಚ್ಚುವುದನ್ನು ನಿಲ್ಲಿಸಬೇಕು. ವಿದೇಶಿ ನೇರ ಬಂಡವಾಳ ಹೆಸರಿನಲ್ಲಿ ವಿವಿಗಳನ್ನು ತೆರೆಯಲು ಅವಕಾಶ ಕೊಡಬಾರದು. ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ಶಿಕ್ಷಣದ ಹೆಸರಿನಲ್ಲಿ ವೌಲ್ಯಗಳನ್ನು ಕಡೆಗಣಿಸಬಾರದು.
ಈ ಎಲ್ಲ ಅಂಶಗಳ ಆಧಾರದ ಮೇಲೆ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಬೇಕು. ಬಡ ಮಕ್ಕಳ ಶಿಕ್ಷಣವನ್ನು ಸಂಪೂರ್ಣವಾಗಿ ಕಸಿಯುವ ಎನ್‌ಎಇಪಿಯನ್ನು ತೆಗೆದು ಹಾಕಲು ವಿದ್ಯಾರ್ಥಿಗಳ ಹೋರಾಟವೇ ಕಾರಣವಾಗಿದೆ ಎಂದು ಅಜಯ್ ಕಾಮತ್ ಹೇಳಿದರು.
ಸಂಘಟನೆ ಜಿಲ್ಲಾಧ್ಯಕ್ಷ ಹಯ್ಯಳಪ್ಪ ಗೊತ್ತುವಳಿ ಮಂಡಿಸಿ, ಜಿಲ್ಲೆಯಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳು ಸೂಕ್ತ ಕಟ್ಟಡ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು.
ರಾಯಚೂರು ವಿವಿಗೆ ಅನುದಾನ ನೀಡಬೇಕು. ನಿಗದಿತ ಸಮಯಕ್ಕೆ ಪರೀಕ್ಷೆ, ಲಿತಾಂಶ ಬರುವಂತೆ ಕ್ರಮಕೈಗೊಳ್ಳಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸಂಸ್ಥೆ ಬಸ್ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ಹಲವು ಹಕ್ಕೋತ್ತಾಯಗಳನ್ನು ಮಂಡಿಸಿದರು.
ಎಸ್‌ಎಲ್‌ಎನ್ ಇಂಜಿನಿಯರಿಂಗ್ ಕಾಲೇಜು ನಿವೃತ್ತ ಪ್ರಾಚಾರ್ಯ ಎಸ್.ಬಿ.ಚೆಟ್ಟಿ ಸಮ್ಮೇಳನ ಉದ್ಘಾಟಿಸಿದರು. ಇದಕ್ಕೂ ಮೊದಲು ಅಂಬೇಡ್ಕರ್ ವೃತ್ತದಿಂದ ಕನ್ನಡ ಭವನದವರೆಗೆ ಮೆರವಣಿಗೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನೆ ಪದಾಕಾರಿಗಳಾದ ಅಭಯ ದಿವಾಕರ್, ಪೀರ್‌ಸಾಬ್, ಹೇಮಂತ್, ಬಸವರಾಜ, ಅಮೋಘ, ವೀರೇಶ ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.