

ವಿಜಯಪುರ: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಉಳುವವನೇ ಭೂಮಿ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಭಾನುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ. ದುರ್ಬಲರ ಏಳಿಗೆಗಾಗಿ ನೂರಾರು ಸಾಮಾಜಿಕ ಸುಧಾರಣಾ ಕಾಯಿದೆ ಜಾರಿಗೆ ತಂದರು. ಸಮಾಜದಲ್ಲಿನ ಅನಿಷ್ಟ ಪದ್ಧತಿ ತೊಡೆದು ಹಾಕುವಲ್ಲಿ ಶ್ರಮಿಸಿದ್ದಾರೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಭತ್ಯೆ ಯೋಜನೆ ಸೇರಿದಂತೆ ಹಲವಾರು ಯೋಜನೆ ಮೂಲಕ ಪರಿವರ್ತನೆಯ ಹರಿಕಾರರಾದರು. ನೀರಾವರಿ ಯೋಜನೆ ಜಾರಿಗೆ ತಂದಿದ್ದಾರೆ. ಡಿ.ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ, ಕನ್ನಡ ಭಾಷೆ ಆಡಳಿತ ಭಾಷೆಯನ್ನಾಗಿ ಅಂಗೀಕರಿಸಿದ್ದರು ಎಂದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮಾತನಾಡಿ, ಡಿ. ದೇವರಾಜ ಅರಸು ಕರ್ನಾಟಕ ಕಂಡ ಧೀಮಂತ ನಾಯಕ. ಅವರು ಅನೇಕ ಸುಧಾರಣೆ ತಂದಿದ್ದಾರೆ. ಭೂ ಸುಧಾರಣಾ ಕಾಯ್ದೆ ರಾಜ್ಯದಲ್ಲಿ ಪರಿಣಾಮಕಾರಿ ಅನುಷ್ಠಾನಗೊಂಡಿದೆ. ಅವರ ಆದರ್ಶ ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಸಮಾರಂಭದಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪುರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಿಪಂ ಯೋಜನಾ ವಿಭಾಗದ ಉಪನಿರ್ದೇಶಕ ಎ.ಬಿ. ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಸತಿ ನಿಲಯದ ಹಿರಿಯ ನಿಲಯ ಪಾಲಕ ಪ್ರಕಾಶ ರಾಠೋಡ ಇದ್ದರು.
ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಬೆಳಗ್ಗೆ ನಗರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಡಿ. ದೇವರಾಜ ಅರಸು ಭಾವಚಿತ್ರದ ಮೆರವಣಿಗೆಗೆ ಡಿಸಿ ಭೂಬಾಲನ್, ಅಪರ ಡಿಸಿ ಮಹಾದೇವ ಮುರಗಿ ಚಾಲನೆ ನೀಡಿದರು. ಕಲಾಮೇಳ ಹಾಗೂ ಕಲಾ ತಂಡಗಳೊಂದಿಗೆ ಮೆರವಣಿಗೆ ಗಾಂಧಿ ಚೌಕ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ಹಾಗೂ ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಜರುಗಿತು.