

ಸದೇಶ್ ಕಾರ್ಮಾಡ್ ಮೈಸೂರು
ಶತಮಾನದ ಇತಿಹಾಸ ಹೊಂದಿರುವ ನಗರದ ದೇವರಾಜ ಮಾರುಕಟ್ಟೆ ಸಂರಕ್ಷಣೆಗೆ ಕಡೆಗೂ ಸರ್ಕಾರ ಮನಸ್ಸು ಮಾಡಿದೆ. ಆದರೆ, ಮತ್ತೊಂದು ಪಾರಂಪರಿಕ ಕಟ್ಟಡ ‘ಲ್ಯಾನ್ಸ್‌ಡೌನ್’ ಸಂಪೂರ್ಣ ದುಸ್ಥಿತಿಗೆ ತಲುಪಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ನೆಲಸಮಗೊಳಿಸಿ ಪಾರಂಪರಿಕ ಶೈಲಿಯಲ್ಲಿ ಮರು ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2024-25ನೇ ಸಾಲಿನ ಬಜೆಟ್‌ನಲ್ಲಿ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಕಟ್ಟಡವನ್ನು ಸಂರಕ್ಷಿಸುವ ಪ್ರಸ್ತಾಪ ಮಾಡಲಾಗಿದೆ. ನಗರ ಪಾಲಿಕೆಯು ಈ ಎರಡು ಕಟ್ಟಡಗಳನ್ನು ನೆಲಸಮ ಮಾಡಿ ಹೊಸದಾಗಿ ನಿರ್ಮಿಸುವ ಕುರಿತು ತೀರ್ಮಾನ ಕೈಗೊಂಡಿತ್ತು. ನಗರ ಪಾಲಿಕೆಯ ಈ ತೀರ್ಮಾನಕ್ಕೆ ಜಿಲ್ಲಾ ಪಾರಂಪರಿಕ ಸಮಿತಿ ಸಹಮತ ವ್ಯಕ್ತಪಡಿಸಿತ್ತು. ಹಾಗಾಗಿ ಈ ಎರಡು ಪಾರಂಪರಿಕ ಕಟ್ಟಡಗಳ ಅಳಿವು, ಉಳಿವು ಸರ್ಕಾರದ ಕೈಯಲ್ಲಿತ್ತು. ಕಡೆಗೂ ಸರ್ಕಾರ ಈ ವಿಚಾರದಲ್ಲಿ ಒಂದು ತೀರ್ಮಾನಕ್ಕೆ ಬಂದಿದೆ.
ದೇವರಾಜ ಮಾರುಕಟ್ಟೆ ಸಂರಕ್ಷಣೆ ಮಾಡುವ ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಪಾರಂಪರಿಕ ತಜ್ಞರ ಅಭಿಪ್ರಾಯ ಪಡೆದು ಸಂರಕ್ಷಣಾ ಕಾರ್ಯ ಕೈಗೊಳ್ಳಲು ಹಾಗೂ ಲ್ಯಾನ್ಸ್‌ಡೌನ್ ಕಟ್ಟಡವನ್ನು ನೆಲಸಮಗೊಳಿಸಿ ಪಾರಂಪರಿಕ ಶೈಲಿಯಲ್ಲಿ ಮರು ನಿರ್ಮಾಣ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ವಿಚಾರವನ್ನು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ‘ವಿಜಯವಾಣಿ’ಗೆ ಖಚಿತ ಪಡಿಸಿದ್ದಾರೆ.
ಲ್ಯಾನ್ಸ್‌ಡೌನ್ ಕಟ್ಟಡದಲ್ಲಿ ಯಾವುದೇ ವ್ಯಾಪಾರ ವಹಿವಾಟು ನಡೆಯದೆ ಕಟ್ಟಡ ಖಾಲಿ ಬಿದ್ದಿದೆ. ಹೀಗಾಗಿ ಬಜೆಟ್ ಘೋಷಣೆ ಪ್ರಕಾರ ಸರ್ಕಾರ ಅನುದಾನ ಒದಗಿಸಿದರೆ ಕಟ್ಟಡವನ್ನು ನೆಲಸಮಗೊಳಿಸಿ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಬಹುದು.
ಲ್ಯಾನ್ಸ್‌ಡೌನ್ ಕಟ್ಟಡದ ಒಂದು ಭಾಗ 2012ರಲ್ಲಿ ಕುಸಿದು ಬಿದ್ದ ಸಂದರ್ಭದಲ್ಲಿಯೇ ಕಟ್ಟಡದಲ್ಲಿದ್ದ ಬಾಡಿಗೆದಾರರನ್ನು ತೆರವುಗೊಳಿಸಿ ಕಟ್ಟಡದ ಮುಂಭಾಗದಲ್ಲಿ ಬಾಡಿಗೆದಾರರಿಗೆ ಮಳಿಗೆ ನಿರ್ಮಾಣ ಮಾಡಿಕೊಡಲಾಗಿದ್ದು, ಅಲ್ಲಿಯೇ ವ್ಯಾಪಾರ ವಹಿವಾಟು ನಡೆಯುತ್ತಿದೆ. ಕಟ್ಟಡದ ಸಂರಕ್ಷಣೆ ಅಥವಾ ಮರು ನಿರ್ಮಾಣದ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಲು ಲ್ಯಾನ್ಸ್‌ಡೌನ್ ಬಾಡಿಗೆದಾರರ ಸಂಘ ತೀರ್ಮಾನಿಸಿದೆ. ಹೀಗಾಗಿ ಲ್ಯಾನ್ಸ್‌ಡೌನ್ ಕಟ್ಟಡ ಪುನರ್ ನಿರ್ಮಾಣಕ್ಕೆ ದೊಡ್ಡ ಮಟ್ಟದ ಆಕ್ಷೇಪಗಳು ವ್ಯಕ್ತವಾಗುವ ಸಾಧ್ಯತೆಗಳು ಕಡಿಮೆ.
ದೇವರಾಜ ಮಾರುಕಟ್ಟೆಯಲ್ಲಿ ಇಂದಿಗೂ ವ್ಯಾಪಾರ ವಹಿವಾಟು ನಡೆಯುತ್ತಿದೆ. ಕಟ್ಟಡ ನೆಲಸಮ ಮಾಡುವುದಕ್ಕೆ ಮೊದಲಿನಿಂದಲೂ ದೇವರಾಜ ಮಾರುಕಟ್ಟೆ ಬಾಡಿಗೆದಾರರು ಹಾಗೂ ನಗರದ ನಾಗರಿಕರು ವಿರೋಧ ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ದೇವರಾಜ ಮಾರುಕಟ್ಟೆಯನ್ನು ಸರ್ಕಾರ ಸಂರಕ್ಷಣೆ ಮಾಡುವ ನಿರ್ಧಾರ ಕೈಗೊಂಡಿರುವುದು ವರ್ತಕರು ಹಾಗೂ ಪಾರಂಪರಿಕ ಕಟ್ಟಡಗಳ ಉಳಿವಿಗೆ ಹೋರಾಟ ನಡೆಸುವವರಿಗೆ ಸಿಕ್ಕ ದೊಡ್ಡ ಗೆಲುವಾಗಿದೆ. ಆದರೆ, ಸರ್ಕಾರದ ಘೋಷಣೆಯ ಪ್ರಕಾರ ಆದಷ್ಟು ಬೇಗ ಕಟ್ಟಡ ಸಂರಕ್ಷಣೆಗೆ ಅನುದಾನ ಬಿಡುಗಡೆಯಾಗಿ ಸಂರಕ್ಷಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇದೆ. ಇಲ್ಲವಾದಲ್ಲಿ ಕಟ್ಟಡ ವರ್ಷ ಕಳೆದಂತೆ ದುಸ್ಥಿತಿಗೆ ತಲುಪಿ ಕುಸಿದು ಬೀಳುವ ಸಾಧ್ಯತೆ ಹೆಚ್ಚು ಇದೆ. ಸರ್ಕಾರ ಬಜೆಟ್‌ನಲ್ಲಿ ಕಟ್ಟಡ ಸಂರಕ್ಷಣೆ ವಿಚಾರ ಪ್ರಸ್ತಾಪಿಸಿದರೂ ನಿರ್ದಿಷ್ಟ ಅನುದಾನ ಘೋಷಿಸದೆ ಇರುವುದು ಬೇಸರ ಮೂಡಿಸುವ ವಿಚಾರ.
ಶತಮಾನದ ಇತಿಹಾಸ ಹೊಂದಿರುವ ಪಾರಂಪರಿಕ ‘ಲ್ಯಾನ್ಸ್‌ಡೌನ್’ ಕಟ್ಟಡ 2012 ಆಗಸ್ಟ್ 23,24 ರಂದು ಸುರಿದ ಧಾರಾಕಾರ ಮಳೆಯಿಂದ ಆ.25 ರಂದು ಸಂಜೆ 6ಕ್ಕೆ ಕಟ್ಟಡದ ಒಂದು ಭಾಗ ಕುಸಿದು ನಾಲ್ವರು ಮೃತಪಟ್ಟಿದ್ದರು. ಲ್ಯಾನ್ಸ್‌ಡೌನ್ ಕಟ್ಟಡದ ದಕ್ಷಿಣ ಭಾಗದ ಮೊದಲ ಮಹಡಿಯ ಕೊಠಡಿ ಸಂಖ್ಯೆ 10, 11 ಮತ್ತು ನೆಲಮಾಳಿಗೆಯ 17ರ ಮೇಲ್ಛಾವಣಿ ಕುಸಿದಿತ್ತು. 11 ಜನವರಿ 2015 ರಂದು ಲ್ಯಾನ್ಸ್‌ಡೌನ್ ಕಟ್ಟಡದ ಜತೆಗೆ ದುಸ್ಥಿತಿಯಲ್ಲಿದ್ದ ಶತಮಾನದ ಇತಿಹಾಸ ಹೊಂದಿರುವ ದೇವರಾಜ ಮಾರುಕಟ್ಟೆ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ದೊರೆಯಿತು. ದೇವರಾಜ ಮಾರುಕಟ್ಟೆಯನ್ನು 9 ಕೋಟಿ ರೂ., ಲ್ಯಾನ್ಸ್‌ಡೌನ್ ಕಟ್ಟಡವನ್ನು 6 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಕಾಮಗಾರಿ ಕೈಗೊಳ್ಳಲಾಯಿತು. ಆದರೆ, 28 ಆಗಸ್ಟ್ 2016 ರಂದು ದೇವರಾಜ ಮಾರುಕಟ್ಟೆ ಸಂರಕ್ಷಣಾ ಕಾರ್ಯ ಸಂದರ್ಭ ಕಟ್ಟಡದ ಒಂದು ಭಾಗ ಕುಸಿದು ಬಿತ್ತು. ಹೀಗಾಗಿ ಲ್ಯಾನ್ಸ್‌ಡೌನ್ ಹಾಗೂ ದೇವರಾಜ ಮಾರುಕಟ್ಟೆಯ ಸಂರಕ್ಷಣಾ ಕಾರ್ಯವನ್ನು ಕೈ ಬಿಡಲಾಯಿತು. ನಂತರ ಕಟ್ಟಡ ಸಂರಕ್ಷಣೆ ವಿಚಾರದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆಗಳು, ಹೋರಾಟಗಳು ನಡೆಯಿತು. ಅಲ್ಲದೆ, ಹೈಕೋರ್ಟ್‌ನಲ್ಲಿ ಸುದೀರ್ಘ ಕಾನೂನು ಹೋರಾಟ ನಡೆಯಿತು. ಅಂತಿಮವಾಗಿ ಜಿಲ್ಲಾ ಪಾರಂಪರಿಕ ಸಮಿತಿಯಲ್ಲಿ ಕಟ್ಟಡದ ವಿಚಾರದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ನ್ಯಾಯಾಲಯ ನಿರ್ದೇಶ ನೀಡಿತು. ಜಿಲ್ಲಾ ಪಾರಂಪರಿಕ ಸಮಿತಿಯು ದೇವರಾಜ ಹಾಗೂ ಲ್ಯಾನ್ಸ್‌ಡೌನ್ ಕಟ್ಟಡವನ್ನು ಕೆಡವಿ ಪಾರಂಪರಿಕ ಶೈಲಿಯಲ್ಲಿ ಮರು ನಿರ್ಮಾಣ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು. ಸರ್ಕಾರ ಸಹ ಹೈಕೋರ್ಟ್‌ನಲ್ಲಿ ಜಿಲ್ಲಾ ಪಾರಂಪರಿಕ ಸಮಿತಿಯ ವರದಿಗೆ ಪೂರಕವಾಗಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ಕಟ್ಟಡ ನೆಲಸಮಗೊಳ್ಳುವ ಸಾಧ್ಯತೆ ಹೆಚ್ಚು ಇತ್ತು. ಆದರೂ ಸರ್ಕಾರ ದೇವರಾಜ ಮಾರುಕಟ್ಟೆ ಉಳಿಸಿಕೊಳ್ಳಲು ಮುಂದಾಗಿರುವುದು ಸ್ವಾಗತಾರ್ಹ ನಡೆಯಾಗಿದೆ.
ದೇವರಾಜ ಮಾರುಕಟ್ಟೆಯನ್ನು ಉಳಿಸಿಕೊಳ್ಳಲಾಗುವುದು. ಲ್ಯಾನ್ಸ್‌ಡೌನ್ ಕಟ್ಟಡ ಸಂರಕ್ಷಣೆ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಆ ಕಟ್ಟಡವನ್ನು ನೆಲಸಮಗೊಳಿಸಿ ಪಾರಂಪರಿಕ ಶೈಲಿಯಲ್ಲಿ ಮರು ನಿರ್ಮಾಣ ಮಾಡಲಾಗುವುದು. ಪಾರಂಪರಿಕ ತಜ್ಞರ ಅಭಿಪ್ರಾಯ ಪಡೆದು ದೇವರಾಜ ಮಾರುಕಟ್ಟೆಯ ಸಂರಕ್ಷಣಾ ಕಾರ್ಯ ಕೈಗೊಳ್ಳಲಾಗುವುದು.
ಕೆ. ಹರೀಶ್ ಗೌಡ, ಶಾಸಕ