

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನಾತ್ಮಕ ವಿಚಾರಣೆ ಪ್ರಕ್ರಿಯೆಗಳಿಗೆ ಒಪ್ಪಿಗೆ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆ ಎಂಬುದು ಸಾಭೀತಾಗಿದೆ. ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶನಿವಾರ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ತನಿಖೆ ಆರಂಭಿಸಿದೆ. ಆದರೆ ತರಾತುರಿಯಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸಂವಿಧಾನದ ದುರುಪಯೋಗವಾಗಿದೆ ಎಂದು ದೂರಿದರು.
ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಹಲವು ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿದ್ದವು. ಆಗ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಈಗ ಕಾಂಗ್ರೆಸ್ ನಾಯಕ ಸಿಎಂ ಸಿದ್ದರಾಮಯ್ಯ ವಿರುದ್ಧ ಸೇಡಿನ ಕ್ರಮ ಕೈಗೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಬೀಳಿಸುವ ಬಿಜೆಪಿ ಪರಿಪಾಠದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಇದನ್ನು ಖಂಡಿ ಹೋರಾಟ ತೀವ್ರಗೊಳಿಸಲಾಗುವುದು. ನಮ್ಮ ಪಕ್ಷದ ನಾಯಕ, ಸಮಾಜವಾದಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪರವಾಗಿ ಇಡೀ ಪಕ್ಷ ನಿಂತಿದೆ. ಯಾವುದೇ ಕಾರಣಕ್ಕೂ ಬಿಜೆಪಿಯ ಉದ್ದೇಶ ಈಡೇರಲು ಬಿಡುವುದಿಲ್ಲ ಎಂದು ಹೇಳಿದರು.
ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ಸೂಡಾ ಮಾಜಿ ಅಧ್ಯಕ್ಷರಾದ ಎನ್.ರಮೇಶ್, ಇಸ್ಮಾಯಿಲ್ ಖಾನ್, ಪ್ರಮುಖರಾದ ಚಿನ್ನಪ್ಪ, ಕೆ.ರಂಗನಾಥ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸೀನಪ್ಪ ಶೆಟ್ಟಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕೆಲ ಸಮಯ ರಸ್ತೆ ತಡೆ ನಡೆಸಿದರು. ಇದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.