

ಬೆಳಗಾವಿ: ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದರು. ಜಿಲ್ಲೆಯ ಸರ್ಕಾರಿ ಶಾಲೆಗಳ ಪರಿಸ್ಥಿತಿ ಕೆಟ್ಟಿದೆ. 1ನೇ ತರಗತಿಯಿಂದ 4ನೇ ತರಗತಿಯ ಮಕ್ಕಳು ಈಗಲೂ ಕೂಡ ನೆಲಕ್ಕೆ ಕುಳಿತು ಓದುತ್ತಿದ್ದಾರೆ. ಮೂಲ ಸೌಕರ್ಯ ಕೊರತೆಯಿಂದಾಗಿ ಮಕ್ಕಳನ್ನು ಅನಿವಾರ್ಯವಾಗಿ ಖಾಸಗಿ ಶಾಲೆಗೆ ಕಳುಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಡಿಜಿಟಲ್ ತಂತ್ರಜ್ಞಾನ ಬಳಕೆ, ಸರ್ಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಆಟದ ಮೈದಾನ, ಶುದ್ಧ ಕುಡಿಯುವ ನೀರು, ಶೌಚಗೃಹ, ಸಮಾನ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಾಲೆಗಳಲ್ಲಿ ಸರ್ಕಾರಿ ನೌಕರರನ್ನು ನೇಮಿಸಬೇಕು, ಬೆಂಚ್ ಸೇರಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯಲ್ಲಿ ಸರ್ಕಾರ ಸುಮಾರು 200 ಕೋಟಿ ರೂ. ವೆಚ್ಚ ಮಾಡಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿದೆ. ಆದರೆ, ಆಸ್ಪತ್ರೆ ಉದ್ಘಾಟಿಸಿಲ್ಲ. ಒಂದು ತಿಂಗಳೊಳಗೆ ಲೋಕಾರ್ಪಣೆಗೊಳಿಸಿ ರೋಗಿಗಳ ಹಿತ ಕಾಯಬೇಕು ಎಂದು ಒತ್ತಾಯಿಸಿದರು. ರಿಜ್ವಾನ್‌ಅಹ್ಮದ್ ಮಕಾಂನದಾರ, ವಿಜಯ ಪಾಟೀಲ ಇತರರಿದ್ದರು.