

ಉಡುಪಿ: ನಗರದ ಕೇಂದ್ರ ಭಾಗದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 500 ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೆಲವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆ ಎದುರಿಸುತ್ತಿರುವುದನ್ನು ಮನಗಂಡು ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ಕೃಷ್ಣ ಮಠದಿಂದ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಹಾಗೂ ಶ್ರೀಕೃಷ್ಣ ಮಠದ ವತಿಯಿಂದ ನೀಡಲಾದ ಶ್ರೀಕೃಷ್ಣ ಅನ್ನಪ್ರಸಾದ ಅನ್ನ ಸಂತರ್ಪಣೆಗೆ ಚಾಲನೆ ನೀಡಿ ಮಾತನಾಡಿದರು.
ಅನ್ನ ಪ್ರಸಾದ ಯೋಜನೆ ನಿರಂತರವಾಗಿ ನಡೆಯಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಸಹಕಾರಿಯಾಗಲಿದೆ. ಸಂಪೂರ್ಣ ಸಹಕಾರ ನೀಡಿದ ಶ್ರೀ ಪುತ್ತಿಗೆ ಮಠದ ಸ್ವಾಮೀಜಿಯವರಿಗೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ, ಶ್ರೀಕೃಷ್ಣಮುಖ್ಯಪ್ರಾಣ ಅನ್ನಪ್ರಸಾದ ಸಮಿತಿ ಅಧ್ಯಕ್ಷ ಶೇಖರ ಕೋಟ್ಯಾನ್, ನಿವೃತ್ತ ಪ್ರಾಂಶುಪಾಲೆ ತಾರಾದೇವಿ ಎಚ್., ಪ್ರಮುಖರಾದ ಯೋಗೀಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.