

ಕೋಲಾರ: ಇತ್ತೀಚಿನ ದಿನಗಳಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಶುಕ್ರವಾರ ಒಣ ದಿನವಾಗಿ ಆಚರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಾ ಬಸವಂತಪ್ಪ ಹೇಳಿದರು.
ತಾಲೂಕಿನ ತೊರದೇವಂಡಹಳ್ಳಿಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಡೆಂಘಿ ಜನಜಾಗೃತಿ ಅಭಿಯಾನದಲ್ಲಿ ಮನೆಮನೆಗೂ ಭೇಟಿ ನೀಡಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿ ಮಾತನಾಡಿದರು.
ಪ್ರತಿ ಶುಕ್ರವಾರ ಡೇ ಆಚರಿಸಿ, ನೀರಿನ ತಾಣಗಳನ್ನು ಸ್ವಚ್ಛಗೊಳಿಸಿ, ಡೆಂಘಿಕಾರಕ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೋಲಾರವನ್ನು ಡೆಂಘಿಮುಕ್ತ ಜಿಲ್ಲೆಯಾಗಿಸಲು ಪ್ರತಿಯೊಬ್ಬರು ಪಣ ತೊಡಬೇಕು ಎಂದರು.
7 ರಿಂದ 10 ದಿನ ಸೊಳ್ಳೆಗಳ ಸಂತತಿ ಬೆಳವಣಿಗೆಯಾಗುವುದರಿಂದ ವಾರಕ್ಕೊಮ್ಮೆ ಪ್ರತಿ ಶುಕ್ರವಾರ ನೀರು ಸಂಗ್ರಹ ಮೂಲಗಳನ್ನು ಸ್ವಚ್ಛಗೊಳಿಸಿ ಒಣದಿನ ಆಚರಿಸಿ ನಂತರ ನೀರು ತುಂಬಿಸಬೇಕು. ಡೆಂಘಿ ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ನಿಖರ ಚಿಕಿತ್ಸೆ ಮತ್ತು ಚುಚ್ಚುಮದ್ದು ಇಲ್ಲದ ಕಾರಣದಿಂದ ಸಾವು ಸಂಭವಿಸಬಹುದು, ಇದಕ್ಕಾಗಿ ಕಾಯಿಲೆ ಬರದಂತೆ ಎಚ್ಚರವಹಿಸಬೇಕು ಎಂದರು.
ಮನುಷ್ಯರಿಗೆ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಪತ್ತೆಯಾಗುತ್ತಿವೆ. ಇದರಲ್ಲಿ ಡೆಂಘಿ ಜ್ವರವು ಸಹ ಒಂದಾಗಿದ್ದು, ಇದರ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತು ರೋಗದಿಂದ ದೂರವಿರಿ. ಮನೆಯಲ್ಲಿರುವ ನೀರಿನ ತೊಟ್ಟಿಗಳು, ಡ್ರಂಗಳು ಮತ್ತು ಸಿಂಟೆಕ್ಸ್ಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ಎಸೆದಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸುವುದು. ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು, ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆ ಬಳಸಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್ ಮಾತನಾಡಿ, ಸಮುದಾಯದ ಸಹಭಾಗಿತ್ವದೊಂದಿಗೆ ಡೆಂಘಿ ನಿಯಂತ್ರಣ ಮಾಡಬಹುದಾಗಿದೆ. ಈಡೀಸ್, ಈಜಿಪ್ಟಿ ಎಂಬ ಸೊಳ್ಳೆ ಕಡಿತದಿಂದ ಹರಡುತ್ತದೆ. ಸೊಳ್ಳೆಗಳು ಯಾವ ರೀತಿ ಉತ್ಪತ್ತಿಗೆ ಕಾರಣಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಿ ಅವರಲ್ಲಿ ರೋಗ ತಡೆಗಟ್ಟಲು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಎ.ವಿ.ನಾರಾಯಣಸ್ವಾಮಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾದೇವಿ, ವೈದ್ಯಾಧಿಕಾರಿ ಡಾ.ರಮೇಶ್, ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ಲೋಕೇಶ್, ಶಶಿಕುಮಾರ್ ಇದ್ದರು.