ಶಿರಸಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ 155 ಮತಗಟ್ಟೆ

24sirsi6- mr kulkarni
Published on

ಶಿರಸಿ: ತಾಲೂಕಿನ 32 ಗ್ರಾಮ ಪಂಚಾಯಿತಿಗಳಿಗೆ ಡಿ.27ರಂದು ನಡೆಯುವ ಚುನಾವಣೆಗೆ 155 ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ತಿಳಿಸಿದರು.

ಇಲ್ಲಿನ ಮಿನಿ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈಗಾಗಲೇ 33 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಉಳಿದ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ಮಸ್ಟರಿಂಗ್​ಹಾಗೂ ಡಿಮಸ್ಟರಿಂಗ್ ಕೇಂದ್ರ ತೆರೆಯಲಾಗುವುದು ಎಂದು ತಿಳಿಸಿದರು.

ತಾಲೂಕಿನಲ್ಲಿ 52233 ಪುರುಷ ಮತದಾರರು, 50658 ಮಹಿಳಾ ಮತದಾರರು ಹಾಗೂ ಒಬ್ಬ ಇತರೆ ಮತದಾರ ಸೇರಿ ಒಟ್ಟು 102892 ಮತದಾರರಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮವಾಗಿ ಒಂದು ಸಾವಿರಕ್ಕಿಂತ ಹೆಚ್ಚು ಮತದಾರರು ಇರುವ 19 ಕಡೆಗಳಲ್ಲಿ ಹೆಚ್ಚುವರಿ ಮತಗಟ್ಟೆ ತೆರೆಯಲಾಗಿದೆ ಎಂದು ತಿಳಿಸಿದರು.

ಮತಗಟ್ಟೆಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ ಚಲಾವಣೆ ಮಾಹಿತಿ ಬಗ್ಗೆ ಮತಗಟ್ಟೆಯ ಹೊರಗೆ ಫಲಕದಲ್ಲಿ ಮಾಹಿತಿ ಅಳವಡಿಸಲಾಗುತ್ತದೆ. 9 ಸೆಕ್ಟರ್ ಅಧಿಕಾರಿ, 2 ಫ್ಲೈಯಿಂಗ್ ಸ್ಕಾ್ವಡ್ ನೇಮಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ 716 ಸಿಬ್ಬಂದಿ ನಿಯೋಜನೆಯಾಗಿದೆ ಎಂದು ವಿವರಿಸಿದರು.

ಈ ವೇಳೆ ಗ್ರೇಡ್-2 ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net