ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ

citu protest
Published on

ಮಡಿಕೇರಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ಕಾಫಿ ಮತ್ತು ಕರಿಮೆಣಸಿನ ತೋಟಗಳೇ ಹೆಚ್ಚಾಗಿವೆ. ಸಾವಿರಾರುಗಟ್ಟಲೆ ಕಾರ್ಮಿಕರು ತೋಟಗಳಲ್ಲಿ ದುಡಿಯುತ್ತಿದ್ದಾರೆ. ಅದೇ ರೀತಿಯಲ್ಲಿ ಕಟ್ಟಡ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಹೆಚ್ಚು ದುಡಿಯುತ್ತಿದ್ದಾರೆ. ಅವರ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಪಡೆಯಬೇಕಾಗಿರುವ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ ಎಂದು ದೂರಿದರು.

ಜಿಲ್ಲೆಯಲ್ಲಿ ಐದು ತಾಲ್ಲೂಕುಗಳು ಇದ್ದರು, ಎರಡು ತಾಲ್ಲೂಕಿನಲ್ಲಿ ಮಾತ್ರ ಕಾರ್ಮಿಕ ನಿರೀಕ್ಷಕರು ಇದ್ದಾರೆ. ಉಳಿದ ಮೂರು ತಾಲ್ಲೂಕುಗಳಲ್ಲಿ ನಿರೀಕ್ಷಕರ ಕೊರತೆ ಮತ್ತು ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಕಾರ್ಮಿಕ ನ್ಯಾಯಾಧೀಶರು ನೇಮಕವಾಗದೆ ಕಾರ್ಮಿಕರು ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರ ಕಾನೂನುಗಳನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗದೆ ಕಾರ್ಮಿಕರು ಅವುಗಳಿಂದ ವಂಚಿತರಾಗುವಂತೆ ಆಗಿದೆ. ಹೀಗಾಗಿ ಕೂಡಲೇ ಕಾರ್ಮಿಕ ನಿರೀಕ್ಷಕರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಪದಾಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net