

ಸೋಮವಾರಪೇಟೆ: ಗ್ರಾಮಸಭೆ ಕೇವಲ ಕಾಟಾಚಾರಕ್ಕೆ ನಡೆಸುವಂತಾಗಿದೆ. ಸಭೆಯ ಬಗ್ಗೆ ಸರಿಯಾದ ಮಾಹಿತಿ ನೀಡುವುದಿಲ್ಲ. ಪ್ರಚಾರವನ್ನೂ ಮಾಡುವುದಿಲ್ಲ. ಈ ಹಿನ್ನೆಲೆಯಲ್ಲಿ ಸಭೆಗೆ ಹೆಚ್ಚಿನ ಜನರು ಬರಲು ಸಾಧ್ಯವಾಗುತ್ತಿಲ್ಲ ಎಂದು ಹಾನಗಲ್ಲು ಗ್ರಾಮಸ್ಥರು ದೂರಿದರು.
ಹಾನಗಲ್ಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧ್ಯಕ್ಷ ಯಶವಂತ್‌ಕುಮಾರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಗ್ರಾಮ ಸಭೆಯಲ್ಲಿ ಹಾನಗಲ್ಲು ಗ್ರಾಮದ ಜನರು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದರು. ಮುಂದಿನ ಸಭೆಗಳಲ್ಲಿ ಈ ರೀತಿಯ ಸಮಸ್ಯೆಯಾಗದಂತೆ ಎಚ್ಚರವಹಿಸಲಾಗುವುದು ಎಂದು ಅಧ್ಯಕ್ಷ ಯಶವಂತ್‌ಕುಮಾರ್ ತಿಳಿಸಿದರು.
ಸೆಸ್ಕ್, ಕೃಷಿ ಇಲಾಖಾಧಿಕಾರಿಗಳು ಸಭೆಗೆ ಆಗಮಿಸದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ನೋಡಲ್ ಅಧಿಕಾರಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಅವರು ಅಧಿಕಾರಿಗಳನ್ನು ಸಭೆಗೆ ಕರೆಸಿದ ನಂತರ ಸಭೆ ಪ್ರಾರಂಭವಾಯಿತು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಯೋಜನೆಗಳ ಹಣ ಇನ್ನೂ ಕೆಲವು ಮನೆಯೊಡತಿಯರ ಖಾತೆಗೆ ಜಮಾ ಆಗದಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯನ್ನು ಗ್ರಾಮಸ್ಥರು ಪ್ರಶ್ನಿಸಿದರು. ಹಾನಗಲ್ಲು ಬಾಣೆ ಮತ್ತು ಪಂಚಾಯಿತಿ ವ್ಯಾಪ್ತಿಯ ಹಲವು ಕಡೆಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಅಬಕಾರಿ ಅಧಿಕಾರಿಯನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಅಬಕಾರಿ ಅಧಿಕಾರಿ ಸುಮತಿ ಸಭೆಗೆ ನೀಡಿದರು.
ಆರೋಗ್ಯ ಇಲಾಖೆ, ಕಂದಾಯ, ಆಹಾರ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಇನ್ನಿತರ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ ವೆಂಕಟೇಶ್ ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಸ್ಮಾ ಇದ್ದರು.