ಗ್ರಾಮ ಒನ್‌ನಿಂದ ಮನೆಬಾಗಿಲಲ್ಲೇ ಸೇವೆ : ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

26Tmk_Grama_One_Sira
Published on

ಶಿರಾ: ಸರ್ಕಾರಿ ಆಡಳಿತವನ್ನು ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗುವ ಮಹತ್ತರ ಉದ್ದೇಶ ಗ್ರಾಮ ಒನ್ ಕೇಂದ್ರದ್ದಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಬುಕ್ಕಾಪಟ್ಟಣ ಗ್ರಾಮದಲ್ಲಿ ಬುಧವಾರ ಗ್ರಾಮ ಒನ್ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ರೈತರು ಮಧ್ಯವರ್ತಿಗಳ ಬಳಿ ಹೋಗುವುದನ್ನು ತಪ್ಪಿಸಿ ಜನರಿಗೆ ನೇರವಾಗಿ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ದೊರೆಯುವಂತೆ ಮಾಡುವ ಗ್ರಾಮ ಒನ್ ಅತ್ಯುತ್ತಮ ಯೋಜನೆಯಾಗಿದೆ ಎಂದರು.

ಗ್ರಾಮ ಒನ್ ಸೇವೆಯನ್ನು ಜನಸಾಮಾನ್ಯರು ಸದ್ಬಳಕೆ ಮಾಡಿಕೊಳ್ಳಬೇಕು. ಗಣರಾಜ್ಯೋತ್ಸವದ ದಿನ ಗ್ರಾಮೀಣ ಜನರಿಗೆ ಮನೆಬಾಗಿಲಿಗೆ ಸರ್ಕಾರದ ಸೇವೆ ಕೊಡುತ್ತಿರುವುದು ಸಂತಸ ತಂದಿದೆ. ಗ್ರಾಮ ಒನ್ ಕೇಂದ್ರಗಳನ್ನು ರಾಜ್ಯದ 12 ಕಡೆಗಳಲ್ಲಿ ವಿಸ್ತರಿಸಲಾಗಿದೆ. ಮುಂದೆ ರಾಜ್ಯದಲ್ಲಿ ಎಲ್ಲೆಡೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಶಾಸಕ ಡಾ. ಸಿ.ಎಂ.ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಉಪ ವಿಭಾಗಾಧಿಕಾರಿ ಸೋಮಪ್ಪ, ತಹಸೀಲ್ದಾರ್ ಮಮತಾ ಮತ್ತಿತರರಿದ್ದರು.

ವರ್ಚುಯಲ್‌ನಲ್ಲಿ ಸಿಎಂ ಚಾಲನೆ

ಗ್ರಾಮೀಣ ಪ್ರದೇಶದಲ್ಲಿ ಜನರ ಕಲ್ಯಾಣಕ್ಕೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಕೆಲಸ ಕಾರ್ಯಗಳು ನಡೆಯಲಿ ಎಂಬ ಮಹತ್ತರ ಉದ್ದೇಶದಿಂದ ಗ್ರಾಮ ಒನ್ ಕೇಂದ್ರ ಪ್ರಾರಂಭಿಸಲಾಗಿದೆ. ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಇದು ಮಹತ್ತರ ಹೆಜ್ಜೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ ಗ್ರಾಮ ಒನ್ ಕೇಂದ್ರವನ್ನು ವರ್ಚುಯಲ್‌ನಲ್ಲಿ ಉದ್ಘಾಟಿಸಿದ ಬಳಿಕ ಮಾತನಾಡಿದರು. ಗ್ರಾಮ ಒನ್ ಕೇಂದ್ರದಲ್ಲಿ ಕಂದಾಯ ಕಟ್ಟುವುದು, ವೃದ್ಧಾಪ್ಯ ವೇತನ, ಸಂಧ್ಯಾಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ ಸೇರಿದಂತೆ ಎಲ್ಲ ಸೇವೆಗಳು ಒಂದೇ ಸೂರಿನಡಿ ಸಿಗಲಿವೆ. ಗ್ರಾಮ ಮಟ್ಟದಲ್ಲಿ ಮಧ್ಯವರ್ತಿಗಳಿಗೆ ಅವಕಾಶವಿಲ್ಲದೆ ಜನರ ಮನೆ ಬಾಗಿಲಿಗೆ ಸರ್ಕಾರಿ ಇಲಾಖೆಯ ಸೇವೆಗಳು ತಲುಪಲಿವೆ. ಈ ಉದ್ದೇಶದಿಂದ ಗ್ರಾಮ ಒನ್ ಕೇಂದ್ರ ಸ್ಥಾಪಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net