

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನವೆಂಬರ್ನಲ್ಲಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಬುಧವಾರ ಹೈಕೋರ್ಟ್ಗೆ ತಿಳಿಸಿದೆ.
ಅವಧಿ ಪೂರ್ಣಗೊಂಡಿರುವ ಗ್ರಾ.ಪಂ.ಗಳಿಗೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಈ ಮಾಹಿತಿ ನೀಡಿದರು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಚುನಾವಣೆ ನಡೆಸುವ ವಿಚಾರವಾಗಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರಕರಣ ಸಂಬಂಧ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದು, ಅದಕ್ಕಾಗಿ ಕಾಲಾವಕಾಶ ನೀಡಬೇಕೆಂದು ಕೋರಿದರು. ಚುನಾವಣಾ ಆಯೋಗ ಸಹ ಈಗಾಗಲೇ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದೆ. ಬಹುತೇಕ ಜಿಲ್ಲಾಧಿಕಾರಿ ಚುನಾವಣೆ ನಡೆಸಬಹುದು ಎಂಬ ನಿಲುವು ತಿಳಿಸಿದ್ದಾರೆ ಎಂದು ಆಯೋಗದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಕರೊನಾ ಸೋಂಕು ಕಡಿಮೆ ಇರುವ ಪ್ರದೇಶಗಳಲ್ಲಿ ಸದ್ಯ ಚುನಾವಣೆ ನಡೆಸಬಹುದಲ್ಲವೇ, ಪ್ರತ್ಯೇಕ ಹಂತದಲ್ಲಿ ಚುನಾವಣೆ ನಡೆಸುವ ಕುರಿತು ಯೋಚಿಸಬಹುದಲ್ಲವೇ ಎಂದು ಸರ್ಕಾರಿ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಕೆ.ಎನ್. ಫಣೀಂದ್ರ, ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಸಹ ಸಿದ್ಧತೆ ನಡೆಸಿದೆ. ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲು ಯೋಜಿಸಲಾಗಿದೆ ಎಂದು ವಿವರಿಸಿದರು. ಅ.23ಕ್ಕೆ ವಿಚಾರಣೆ ಮುಂದೂಡಲಾಯಿತು.