

ಬೇಲೂರು : ಸಾರ್ವಜನಿಕ ಕ್ಷೇತ್ರಕ್ಕೆ ಬರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಕೆಲಸವನ್ನು ದೇವರ ಕೆಲಸವೆಂದು ಭಾವಿಸಿ ಮಾಡಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ತಾಲೂಕಿನ ನಾರ್ವೆ ಪೇಟೆ ಗ್ರಾಪಂನ 2023-24 ನೇ ಸಾಲಿನ ಪ್ರಥಮ ಗ್ರಾಮ ಸಭೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ನಾರ್ವೆ ಭಾಗವು ಮಲೆನಾಡು ಪ್ರದೇಶವಾಗಿದೆ, ಇಲ್ಲಿ ಅನೇಕ ಸಮಸ್ಯೆಗಳಿವೆ.ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ನಾವೆಲ್ಲರೂ ಶ್ರಮ ವಹಿಸಿ ಕೆಲಸ ಮಾಡಬೇಕಿದೆ. ಗ್ರಾಮ ಸಭೆಗಳನ್ನು ಮಾಡುವ ಉದ್ದೇಶವೇ ಸಾರ್ವಜನಿಕರ ಹಿತ ಪಾಲನೆಗಾಗಿ ಎಂದರು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ವಿದ್ಯುತ್, ಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಇದನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ನಗರ ಪ್ರದೇಶಗಳಿಗೆ ತೆರಳುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ವ್ಯವಸ್ಥೆ ಮಾಡಿಕೊಡಬೇಕು.ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ತಾಕೀತು ಮಾಡಿದರು.
ಹಳ್ಳಿಗಾಡಿನ ಜನರನ್ನು ಕಚೇರಿಗಳಿಗೆ ಅಲೆಸಬಾರದು. ಗ್ರಾಮಗಳಲ್ಲಿ ಚಿರತೆ, ಆನೆಗಳ ದಾಳಿ ತಡೆಗೆ ರಸ್ತೆ ಬದಿಯ ಗಿಡ ಗಂಟಿಗಳನ್ನು ತೆರವು ಗೊಳಿಸಬೇಕು. ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಬೇಕು ಎಂದರು.
ನಾರ್ವೆ ಪೇಟೆ ಗ್ರಾಪಂ ಅಧ್ಯಕ್ಷೆ ಮಾಲಾಶ್ರೀ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸುಲಗಳಲೆ, ಸದಸ್ಯ ಮಲ್ಲಿಕಾರ್ಜುನ ನಾರ್ವೆ, ತಾಪಂ ಮಾಜಿ ಸದಸ್ಯ ಸೋಮಯ್ಯ, ಇಒ ಸತೀಶ್, ಅಭಿವೃದ್ಧಿ ಅಧಿಕಾರಿ ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.