ಕಂದಾಯ ಸಚಿವರ ಗ್ರಾಮ ವಾಸ್ತವ್ಯ

DC
Published on

ಧಾರವಾಡ: ಹುಬ್ಬಳ್ಳಿ ತಾಲೂಕು ಛಬ್ಬಿ ಗ್ರಾಮದಲ್ಲಿ ಮಾ. 20ರಂದು ಕಂದಾಯ ಸಚಿವ ಆರ್. ಅಶೋಕ ವಾಸ್ತವ್ಯ ಮಾಡಲಿದ್ದಾರೆ. ಛಬ್ಬಿ ಹೋಬಳಿ ಹಾಗೂ ಸುತ್ತಲಿನ ಹಳ್ಳಿಗಳ ಜನರ ಅಹವಾಲು ಸ್ವೀಕಾರಕ್ಕೆ ಸ್ಥಳೀಯ ಗ್ರಾಪಂನಲ್ಲಿ ಈಗಾಗಲೇ ಕೌಂಟರ್ ತೆರೆಯಲಾಗಿದೆ. ಜನರ ಅಹವಾಲುಗಳಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ ದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ತಪಾಸಣೆ ಶಿಬಿರ, ದಂತ ಭಾಗ್ಯ, ಪಶುಸಂಗೋಪನಾ ಇಲಾಖೆಯಿಂದ ಪಶುಚಿಕಿತ್ಸಾ ಶಿಬಿರ, ಅಂಗವಿಕಲರ ಕಲ್ಯಾಣ ಇಲಾಖೆಯಿಂದ ಕೃತಕ ಕೈ, ಕಾಲುಗಳ ಜೋಡಣಾ ಶಿಬಿರ, ತ್ರಿಚಕ್ರ ವಾಹನಗಳ ವಿತರಣೆ ಸೇರಿ ವಿವಿಧ ಇಲಾಖೆಗಳ ಯೋಜನೆಗಳನ್ನು ಒಟ್ಟುಗೂಡಿಸಿ ಫಲಾನುಭವಿಗಳನ್ನು ಗುರುತಿಸಬೇಕು ಎಂದರು.

ಮಾ. 20ರಂದು ಬೆಳಗ್ಗೆ 11 ಗಂಟೆಗೆ ಗ್ರಾಮಕ್ಕೆ ಆಗಮಿಸುವ ಸಚಿವರು, ಚಕ್ಕಡಿ ಮೂಲಕ ಗ್ರಾಮ ವೀಕ್ಷಿಸುವರು. ಸೂಕ್ತ ಬಂದೋಬಸ್ತ್, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಕಳೆದ ತಿಂಗಳು ಕೋಗಿಲಗೇರಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅನುಭವ ಆಧರಿಸಿ ಛಬ್ಬಿಯಲ್ಲಿ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಬೇಕು. ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳನ್ನು ಈ ಕುರಿತು ಜಾಗೃತಗೊಳಿಸಬೇಕು ಎಂದರು.

ಜಿಪಂ ಸಿಇಒ ಡಾ. ಬಿ. ಸುಶೀಲಾ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಹಾಗೂ ಇತರ ಸಂಬಂಧಿತ ಇಲಾಖೆಗಳ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಅಧಿಕಾರಿಗಳು, ಇತರರು ಇದ್ದರು.

ಛಬ್ಬಿಯಲ್ಲಿ ಪೂರ್ವಭಾವಿ ಸಭೆ

ಹುಬ್ಬಳ್ಳಿ: ಮಾ. 20ರಂದು ಕಂದಾಯ ಸಚಿವ ಆರ್. ಅಶೋಕ ಅವರು ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿರುವ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿ, ಪೂರ್ವಭಾವಿ ಸಭೆ ಜರುಗಿಸಿದರು.

ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳ ಕುರಿತಂತೆ ಗ್ರಾಮಸ್ಥರು ಸಚಿವರ ವಾಸ್ತವ್ಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಈಗ ಸಲ್ಲಿಕೆಯಾದ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗುವುದು. ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗ್ರಾಮ ವಾಸ್ತವ್ಯ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಪ್ರಕಾಶ ನಾಶಿ, ನಗರ ತಹಸೀಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ವಿವಿಧ ಅಧಿಕಾರಿಗಳು, ಗ್ರಾಮದ ಜನಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net