

ಗದಗ: ಡಾ.ಪಂಡಿತ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ಎಪಿಎಂಸಿ ಹತ್ತಿರದ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದದರು.
ಕಾಮಗಾರಿ ಕುರಿತು ಮಾಹಿತಿ ನೀಡಿದ ಲೋಕೋಪಯೋಗಿ ಅಧಿಕಾರಿಗಳು, ಸ್ಮಾರಕ ಕಟ್ಟಡ ಕಾಮಗಾರಿಗೆ ಸರ್ಕಾರದಿಂದ ಈಗಾಗಲೇ 5 ಕೋಟಿ ರೂ.ಅನುದಾನ ಒದಗಿಸಲಾಗಿತ್ತು. ಅದರಂತೆ ಕಾಮಗಾರಿ ಆರಂಭಿಸಿ ಅನುದಾನ ಬಳಸಲಾಗಿದೆ. ಹೆಚ್ಚುವರಿಯಾಗಿ 1.25 ಕೋಟಿ ರೂ. ವೆಚ್ಚ ಮಾಡಲಾಗಿದ್ದು ಕಾಮಗಾರಿ ಪೂರ್ಣಗೊಳಿಸಲು ಇನ್ನೂ 7 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದರು.
ಪ್ರತಿಕ್ರಿಯಿಸಿದ ಸಚಿವರು, ಸ್ಮಾರಕ ಪೂರ್ಣಗೊಳಿಸಲು ಅಗತ್ಯ ಅನುದಾನ ನೀಡುವಂತೆ ಕನ್ನಡ ಸಂಸ್ಸತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸೂಕ್ತ ಪ್ರಸ್ತಾವನೆ ಸಲ್ಲಿಸಿ ಅನುದಾನ ಪಡೆಯಲಾಗುತ್ತದೆ. ಅನುದಾನ ಬಿಡುಗಡೆಯಾದ ತಕ್ಷಣ ಅಧಿಕಾರಿಗಳು ಟೆಂಡರ್ ಕರೆದು ಆಗಸ್ಟ್ 15ರ ಒಳಗಾಗಿ ಕಾಮಗಾರಿಯನ್ನು ಪುನಃ ಆರಂಭಿಸಿ ಪೂರ್ಣಗೊಳಿಸಬೇಕು. ಯೋಜನೆಯಂತೆ ಕಾಮಗಾರಿ ಪೂರ್ಣಗೊಂಡಲ್ಲಿ ಸ್ಮಾರಕ ಭವನದ ಮೇಲ್ಗಡೆಯಿಂದ ವೀಕ್ಷಿಸಿದಾಗ ವೀಣೆಯಾಕಾರದ ಕಟ್ಟಡ ಸ್ವರೂಪ ಸರಿಯಾಗಿ ಗೋಚರಿಸವಂತೆ ಕಟ್ಟಡ ನಿರ್ಮಿಸಬೇಕು ಎಂದರು.
ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಜಿ.ಪಂ. ಸಿಇಒ ಡಾ. ಸುಶೀಲಾ ಬಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ವೀರಯ್ಯಸ್ವಾಮಿ ಹಿರೇಮಠ, ಕೊಟ್ರೇಶ ವಿಭೂತಿ, ಪಿ.ಎಸ್. ಪಾಟೀಲ ಇತರರು ಇದ್ದರು.