ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಪ್ರಯುಕ್ತ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಘಟಕದ ಆತಿಥ್ಯದಲ್ಲಿ ಗುರುಗಳು ಹಾಗೂ ಅವರ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಪವಿತ್ರ ಕ್ಷೇತ್ರಗಳ ಪರಿಚಯ ಒಳಗೊಂಡಿರುವ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಬಿಡುಗಡೆ ಆ.24ರಂದು ಸಂಜೆ 3.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೊರಗಪ್ಪ ಸಭಾಂಗಣದಲ್ಲಿ ಜರುಗಲಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಲಯಾಳ ಮೂಲದಲ್ಲಿ ಕೆ.ಪಿ. ಬಾಲಕೃಷ್ಣನ್ ಅವರು ಬರೆದ ಕೃತಿಯನ್ನು ಡಾ. ಮೀನಾಕ್ಷಿ ರಾಮಚಂದ್ರ ಅವರು ಕನ್ನಡಕ್ಕೆ ಅನುವಾದಗೊಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಗ್ರಂಥ ಲೋಕಾರ್ಪಣೆಗೊಳಿಸುವರು. ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಪೀಠಾಪತಿ ಶ್ರೀ ವಿಖ್ಯಾತಾನಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಕುದ್ರೋಳಿ ಶ್ರೀ ಗೊಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್ ಉದ್ಘಾಟಿಸುವರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಅಧ್ಯಕ್ಷತೆ ವಹಿಸುವರು ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಪಿ.ಎಲ್ ಧರ್ಮ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಸತ್ಯಜಿತ್ ಸುರತ್ಕಲ್, ಉದಯ ಪೂಜಾರಿ ಹಾಗೂ ಯುವವಾಹಿನಿಯ 34 ಘಟಕಗಳ ಸದಸ್ಯರು ಹಾಗೂ ವಿವಿಧ ಬಿಲ್ಲವ ಸಂಘಗಳ ಪದಾಧಿಕಾರಿಗಳು ಭಾಗವಹಿಸುವರು ಎಂದರು.
ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ನಾರಾಯಣ ಗುರು ತತ್ವಪ್ರಚಾರ ಅನುಷ್ಠಾನ ನಿರ್ದೇಶಕ ಮೋಹನ್ ಮಾಡೂರು, ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ನಾಗೇಶ್ ಅಮೀನ್, ಕಾರ್ಯದರ್ಶಿ ಶ್ರವಣ್ ಎಸ್. ಕೂಳೂರು, ನಾರಾಯಣ ಗುರು ತತ್ವಪ್ರಚಾರ ಅನುಷ್ಠಾನ ನಿರ್ದೇಶಕ ಪೂವಪ್ಪ ಕುಕ್ಯಾನ್, ಗ್ರಂಥದ ಮಾರ್ಗದರ್ಶಕ ರಾಮಚಂದ್ರ ಪೂಜಾರಿ ಉಪಸ್ಥಿತರಿದ್ದರು.