

ಬೆಳಗಾವಿ: ಕರ್ನಾಟಕದ ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶೀಘ್ರವೇ ಸಭೆ ಕರೆಯುವುದಾಗಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರು ಬೆಳಗಾವಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಮಂಗಳವಾರ ನವದೆಹಲಿಯಲ್ಲಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ನೇತೃತ್ವದ ನಿಯೋಗ ಭೇಟಿಯಾಗಿ ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿತು. ದ್ರಾಕ್ಷಿಗೆ ಬೆಂಬಲ ಬೆಲೆ ನೀಡುವುದು, ದ್ರಾಕ್ಷಿ ಆಮದು ಸುಂಕವನ್ನು ಹೆಚ್ಚಿಸುವುದು, ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರ ಸಾಲವನ್ನು ಮನ್ನಾ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಲಿದೆ. ಆದಷ್ಟು ಬೇಗ ಸಭೆಯೊಂದನ್ನು ಕರೆಯುವುದಾಗಿ ಸಚಿವರು ಭರವಸೆ ನೀಡಿದರು. ಅಥಣಿಯ ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ, ಜಿಪಂ ಮಾಜಿ ಸದಸ್ಯ ಸಿದ್ದಪ್ಪ ಮುದಕನ್ನವರ, ಪ್ರಕಾಶ ಪಾಟೀಲ, ಶ್ರೀಕಾಂತ ಮಕಾನಿ, ಅಪ್ಪಾಸಾಹೇಬ ತೇರದಾಳ, ಸುಭಾಷ ಮೋರೆ, ಸುರೇಶ ಆವಟಿ ಇದ್ದರು. ಕೇಂದ್ರ ಸಚಿವರಾದ ಕುಮಾರಸ್ವಾಮಿ, ಶೋಭಾ ಕರಂದ್ಲಾಚೆ, ನಿರ್ಮಲಾ ಸೀತಾರಾಮನ್ ಅವರನ್ನೂ ನಿಯೋಗವು ಭೇಟಿಯಾಗಿ ಚರ್ಚಿಸಿತು.