ಯುವ ಮತದಾರರಲ್ಲಿ ಹೆಚ್ಚಿನ ಅರಿವು: ಡಾ.ಬಿ.ಸಿ.ಸತೀಶ

27adarshkdga7
Published on

ಮಡಿಕೇರಿ: ಜಿಲ್ಲೆಯ ೫೪೨ ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ವಿದ್ಯುನ್ಮಾನ ಮತಯಂತ್ರ(ಇವಿಎಂ) ಮತ್ತು ವಿವಿ ಪ್ಯಾಟ್ ಅರಿವು ಕುರಿತು ಪ್ರಾತ್ಯಕ್ಷಿಕೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.


ನಗರದ ಉಪ ವಿಭಾಗಾಧಿಕಾರಿರವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಯುವ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆದವರು ಪ್ರಾತ್ಯಕ್ಷಿಕೆಯ ಅವಕಾಶವನ್ನು ಬಳಸಿಕೊಳ್ಳಬೇಕು. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಈ ಅಣಕು ಮತದಾನ ನಡೆಯಲಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.


ಈಗಾಗಲೇ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಅಣಕು ಪ್ರದರ್ಶನವು ಜಿಲ್ಲಾಧಿಕಾರಿ ಕಚೇರಿ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ. ಮತಗಟ್ಟೆ ವ್ಯಾಪ್ತಿಯಲ್ಲಿ ನಿಗದಿತ ಅವಧಿಯಲ್ಲಿ ಅಣಕು ಪ್ರದರ್ಶನ ನಡೆಯಲಿದೆ. ೧೮ ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.


ರಾಜಕೀಯ ಪಕ್ಷದ ಮುಖಂಡರೊಂದಿಗೆ ಚರ್ಚೆ: ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ, ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶೇ.೬೦ ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನವಾಗಲು ಅರಿವು ಮೂಡಿಸುವಂತೆ ಕೋರಿದರು.


ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್, ಶಬಾನಾ ಎಂ.ಶೇಖ್, ರಾಜಕೀಯ ಪಕ್ಷಗಳ ಪ್ರಮುಖರಾದ ಅಪ್ಪಣ್ಣ(ಬಿಜೆಪಿ), ತೆನ್ನಿರಾ ಮೈನಾ(ಕಾಂಗ್ರೆಸ್), ಗುಲಾಬಿ(ಜೆಡಿಎಸ್), ತಹಶೀಲ್ದಾರರಾದ ಕಿರಣ್, ಪ್ರಶಾಂತ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net