ಮ.ಬೆಟ್ಟದ ಅಭಿವೃದ್ಧಿಗೆ ಹೆಚ್ಚಿನ ಒತ್ತು

12 HANUR 2
ಮಲೆಮಹದೇಶ್ವರ ಬೆಟ್ಟದ ಶ್ರೀಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ರಘು ಅವರು ಮಾದಪ್ಪನ ಸನ್ನಿಧಿಗೆ ತೆರಳಿ ದೇವರ ದರ್ಶನ ಪಡೆದರು. ಕರವೀರಸ್ವಾಮಿ ಇತರರಿದ್ದರು.
Published on

ಹನೂರು : ಶ್ರೀಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಷೇಧ, ಸ್ವಚ್ಛತೆ ಹಾಗೂ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ ಶ್ರೀಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿ ಎ.ಈ ರಘು ತಿಳಿಸಿದರು.

ಸೋಮವಾರ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಅವರು ವಿಜಯವಾಣಿಯೊಂದಿಗೆ ಮಾತನಾಡಿ, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಪ್ರಾಧಿಕಾರ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಇಲ್ಲಿ ಆಡಳಿತ ಎನ್ನುವುದಕ್ಕಿಂತ ಮೊದಲು ಭಗವಂತನ ಸೇವೆ ಮಾಡಬೇಕು ಎನ್ನುವುದು ನನ್ನ ಉದ್ದೇಶ. ಹಾಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು, ನೌಕರರು ಹಾಗೂ ಶ್ರೀಸಾಲೂರು ಬೃಹನ್ಮಠದ ಸಂಪೂರ್ಣ ಸಹಕಾರ ಪಡೆದುಕೊಂಡು ಶ್ರೀಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.

ಅರಣ್ಯ ಪ್ರದೇಶದಿಂದ ಆವರಿಸಿರುವ ಶ್ರೀಕ್ಷೇತ್ರದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಇದರಿಂದ ವನ್ಯಪ್ರಾಣಿಗಳ ಜೀವಕ್ಕೆ ಮಾರಕವಾಗಿ ಪರಿಣಮಿಸಲಿದೆ. ಜತೆಗೆ ಶ್ರೀಕ್ಷೇತ್ರದ ಅನೈರ್ಮಲ್ಯಕ್ಕೂ ಕಾರಣವಾಗಿದೆ. ಹಾಗಾಗಿ ಪ್ಲಾಸ್ಟಿಕ್ ನಿಷೇಧಕ್ಕೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಸ್ವಚ್ಛತೆಗೂ ಆದ್ಯತೆ ನೀಡಲಾಗುವುದು. ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಕೊರತೆಯಾಗದಂತೆ ಮುತುವರ್ಜಿ ವಹಿಸಲಾಗುವುದು. ಜತೆಗೆ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು. ಈ ಮೂಲಕ ರಾಜ್ಯದಲ್ಲಿ ಪ್ರಾಧಿಕಾರವನ್ನು ಆಕರ್ಷಿಸುವಂತೆ ಮಾಡಲು ಅಗತ್ಯ ಮುತುವರ್ಜಿ ವಹಿಸಲಾಗುವುದು ಎಂದು ತಿಳಿಸಿದರು.

ಸಾಲೂರು ಮಠಕ್ಕೆ ಭೇಟಿ: ಬಳಿಕ ಕಾರ್ಯದರ್ಶಿ ರಘು ಅವರು ಶ್ರೀಸಾಲೂರು ಮಠಕ್ಕೆ ತೆರಳಿ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಗೌರವಿಸಿ ಆಶೀರ್ವಾದ ಪಡೆದರು. ಮಾದಪ್ಪನ ಸನ್ನಿಧಿಗೆ ತೆರಳಿ ದೇವರ ದರ್ಶನ ಪಡೆದು ತಾಂಬೂಲ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ದೇಗುಲದ ಪ್ರಧಾನ ಆಗಮಿಕ ಕರವೀರಸ್ವಾಮಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net