

ಹನೂರು: ಹಸಿರು ಪಟಾಕಿ ಚಿಹ್ನೆ ಹಾಗೂ ಕ್ಯೂ ಆರ್ ಕೋಡ್ ಇಲ್ಲದ ಪಟಾಕಿಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜತೆಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಸೂಚಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯ ಕಾನ್ಫರೆನ್ಸ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ಧ ಪಟಾಕಿ ಮಾರಾಟಗಾರರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಅಗತ್ಯ ಸೂಚನೆಯನ್ನು ನೀಡಿದ್ದಾರೆ. ಈ ದಿಸೆಯಲ್ಲಿ ಪಟ್ಟಣ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಒತ್ತು ನೀಡಬೇಕು. ಮಳಿಗೆಗಳಿಗೆ ತೆರಳಿ ಪಟಾಕಿಗಳು ಹೊಂದಿರುವ ಶಬ್ದ ಮಾಪನ ಮಾಡಬೇಕು. ಜತೆಗೆ ಹಸಿರು ಪಟಾಕಿ ಹಾಗೂ ಕ್ಯೂಆರ್ ಕೋಡ್ ಇರುವುದನ್ನು ಪರಿಶೀಲಿಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ ಹಾಗೂ ಇನ್ನಿತರ ನಿಷೇಧಿತ ಪ್ರದೇಶಗಳಲ್ಲಿ ಪಟಾಕಿ ಸಿಡಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದರು.
ಪಪಂ ಮುಖ್ಯಾಧಿಕಾರಿ ಮೂರ್ತಿ ಹಾಗೂ ತಾಪಂ ಸಹಾಯಕ ನಿರ್ದೇಶಕ ರವೀಂದ್ರ ಅವರಿಗೆ ಭಿತ್ತಿಪತ್ರ ಹಾಗೂ ಧ್ವನಿವರ್ಧಕದ ಮೂಲಕ ಪಟ್ಟಣ ಹಾಗೂ ಗ್ರಾಮಗಳಲ್ಲಿ ಪರಿಸರ ಮಾಲಿನ್ಯ ಸಂಬಂಧ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಸರ್ಕಾರದ ನಿಯಮಗಳನ್ನು ಪಾಲಿಸುವುದರ ಮೂಲಕ ಪಟಾಕಿ ಮಾರಾಟ ಮಾಡಬೇಕು. ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಪಟಾಕಿ ಮಾರಾಟಗಾರರಿಗೆ ತಿಳಿಸಿದರು.
ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್, ಪಪಂ ಕಂದಾಯ ನಿರೀಕ್ಷಕ ಮಾದೇಶ್, ಅಗ್ನಿಶಾಮಕ ಠಾಣೆ ಸಿಬ್ಬಂದಿ ಮಹೇಶ್, ಹರ್ಷ ಇದ್ದರು.