ಜಿಲ್ಲೆಯಲ್ಲಿ ಗೃಹಲಕ್ಷ್ಮೀಗೆ 4,77,561 ಮಹಿಳೆಯರು ಅರ್ಹರು: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

1
Published on

ಮಂಡ್ಯ: ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ 4,77,561 ಮಹಿಳೆಯರು ಅರ್ಹರಿದ್ದಾರೆ. ಅಂತೆಯೇ ಆ.28ರವರೆಗೆ 4,15,620 ಮಹಿಳೆಯರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೋಂದಣಿಗಾಗಿ 479 ಕೇಂದ್ರಗಳನ್ನು ತೆರೆಯಲಾಗಿತ್ತು. ಇನ್ನು ಆ.30ರಂದು ಮೈಸೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಕೆ.ಆರ್.ಪೇಟೆ ತಾಲೂಕಿನಿಂದ 38, ಮದ್ದೂರಿನಿಂದ 81, ಮಳವಳ್ಳಿಯಿಂದ 82, ಮಂಡ್ಯದಿಂದ 100, ನಾಗಮಂಗಲದಿಂದ 46, ಪಾಂಡವಪುರದಿಂದ 52 ಹಾಗೂ ಶ್ರೀರಂಗಪಟ್ಟಣ ತಾಲೂಕಿನಿಂದ 67 ಸೇರಿದಂತೆ ಒಟ್ಟು 466 ಬಸ್ ಗಳಲ್ಲಿ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಅಂದು ಮಹಿಳೆಯರು ತಮ್ಮ ಮನೆಯ ಮುಂದೆ ನಾ ಯಜಮಾನಿ ಎಂದು ರಂಗೋಲಿ ಬಿಡಿಸಿ ಯೋಜನೆಯನ್ನು ಸ್ವಾಗತಿಸಬೇಕೆಂದು ಮನವಿ ಮಾಡಿದರು.

ಈ ಯೋಜನೆಗೆ ಒಂದು ವರ್ಷಕ್ಕೆ ಅಂದಾಜು 36 ಸಾವಿರ ಕೋಟಿ ರೂ ವೆಚ್ಚವಾಗಲಿದೆ. ಈ ಹಣ ಮಹಿಳೆಯರಿಗೆ ಆರ್ಥಿಕವಾಗಿ ಸಬಲೀಕರಣವಾಗಲು ಉಪಯುಕ್ತವಾಗಲಿದೆ. ಯಾವುದೇ ಯೋಜನೆ ಅನುಷ್ಠಾನವಾಗಬೇಕಾದಲ್ಲಿ ಅಧಿಕಾರಿಗಳ ಪಾತ್ರ ಮಹತ್ವವಾಗಿರುತ್ತದೆ. ಈ ಯೋಜನೆಗೆ ಶ್ರಮಿಸಿರುವ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ 25 ಸಾವಿರ ಫಲಾನುಭವಿಗಳನ್ನು 466 ಬಸ್‌ಗಳಲ್ಲಿ ಕರೆದುಕೊಂಡು ಹೋಗಲು ಯೋಜಿಸಲಾಗಿದೆ. ಇದಕ್ಕಾಗಿ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು. ಕುಡಿಯುವ ನೀರು, ಉಪಹಾರ ಸೇರಿದಂತೆ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮ ಮುಗಿದ ನಂತರ ಫಲಾನುಭವಿಗಳನ್ನು ಸುರಕ್ಷಿತವಾಗಿ ಗ್ರಾಮಗಳಿಗೆ ಕರೆತರಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಕದಲೂರು ಉದಯ್, ರವಿಕುಮಾರ್ ಗಣಿಗ, ದರ್ಶನ್ ಪುಟ್ಟಣ್ಣಯ್ಯ, ಎಂಎಲ್‌ಸಿ ದಿನೇಶ್‌ಗೂಳಿಗೌಡ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net