ಗೃಹಲಕ್ಷ್ಮೀ ಯೋಜನೆ, ಜು.19 ರಿಂದ ನೋಂದಣಿ

Screenshot_2023-07-16-00-18-12-59.jpg
Published on

ಬೆಳಗಾವಿ: ಸರ್ಕಾರದ ಮಾರ್ಗಸೂಚಿಯ  ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.
 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
 ಜುಲೈ 19ರ ಸಂಜೆ ಮುಖ್ಯಮಂತ್ರಿಗಳು ನೋಂದಣಿಗೆ ಚಾಲನೆ ನೀಡಿದ ಬಳಿಕ ರಾಜ್ಯದಾದ್ಯಂತ ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿಯೂ ಆರಂಭಗೊಳ್ಳಲಿದೆ. ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯಲ್ಲಿರುವ ಪಡಿತರ ಚೀಟಿ ಕಾರ್ಡ್‌ಗಳು ಹಾಗೂ ಮಹಿಳೆಯರು ಮನೆಯ ಯಜಮಾನತಿಯಾಗಿರುವ ಬಗ್ಗೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗಿದೆ ಎಂದರು.
 ಇದಕ್ಕೂ ಮುಂಚೆ ನಡೆದ ಜಿಲ್ಲಾಧಿಕಾರಿಗಳ ಜತೆಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಜು.19ರ ಸಂಜೆ 5ರ ನಂತರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು. ಮರುದಿನ ದಿಂದ ನೋಂದಣಿ ಕೇಂದ್ರಗಳು ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದರು.
 ನೋಂದಣಿಗೆ ಆಗಮಿಸುವ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಬೇಕು. ಮಳೆಗಾಲ ಇರುವುದರಿಂದ ಸರದಿಯಲ್ಲಿ ನಿಲ್ಲಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು. ನೋಂದಣಿ ಕೇಂದ್ರಗಳಲ್ಲಿ ಸ್ಥಳೀಯ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸಬೇಕು. ಇದರಿಂದ ನೋಂದಣಿ ಪ್ರಕ್ರಿಯೆ ಮೇಲ್ವಿಚಾರಣೆ ಕೂಡ ಸುಗಮವಾಗಲಿದೆ. ಆದ್ದರಿಂದ ಪ್ರತಿ ನೋಂದಣಿ ಕೇಂದ್ರಗಳಲ್ಲಿ ಮೇಲ್ವಿಚಾರಣಾಧಿಕಾರಿಗಳು ಹಾಗೂ ಸೂಕ್ತ ಭದ್ರತೆಯನ್ನು ಕಲ್ಪಿಸಬೇಕು ಎಂದರು.
 ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೋಯರ್, ಐ.ಎ.ಎಸ್. ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ್ ಮತ್ತಿತರರು ಸಭೆಯಲ್ಲಿ ಇದ್ದರು. ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net